ನವದೆಹಲಿ: ಎಐಡಿಎಂಕೆ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದ ಸಂದರ್ಭದಲ್ಲಿ ನಡೆದ ನೇಮಕಾತಿ ಹಗರಣ ಹಾಗೂ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.
ಫೆಬ್ರವರಿ 28 ರಂದು ಮದ್ರಾಸ್ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿದ ನಂತರ ಸೆಂಥಿಲ್ ಬಾಲಾಜಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಇ.ಡಿ ಪರವಾಗಿ ಮತ್ತು ಹಿರಿಯ ವಕೀಲರಾದ ಮುಕುಲ್ ರೋಹಟಗಿ, ಸಿದ್ಧಾರ್ಥ್ ಲೂತ್ರಾ ಸೆಂಥಿಲ್ ಬಾಲಾಜೀ ಪರ ವಾದ ಮಂಡಿಸಿದ್ದರು. ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಆಗಸ್ಟ್ 12ರಂದು ಕಾಯ್ದಿರಿಸಿತ್ತು.
ಬಾಲಾಜಿ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್, ಈ ರೀತಿಯ ಪ್ರಕರಣದಲ್ಲಿ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ಅದು ತಪ್ಪು ಸಂಕೇತವನ್ನು ನೀಡುತ್ತದೆ. ಸಾರ್ವಜನಿಕ ಹಿತಾಸಕ್ತಿ ವಿರುದ್ಧವಾಗಿರುತ್ತದೆ. ಅರ್ಜಿದಾರರು ಎಂಟು ತಿಂಗಳಿಗೂ ಹೆಚ್ಚು ಕಾಲ ಕಸ್ಟಡಿಯಲ್ಲಿರುವುದರಿಂದ ಕಾಲಮಿತಿಯೊಳಗೆ ಪ್ರಕರಣವನ್ನು ವಿಲೇವಾರಿ ಮಾಡುವಂತೆ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡುವುದು ಸೂಕ್ತ ಎಂದು ಹೇಳಿತ್ತು.