ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಹೈಕೋರ್ಟ್ ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ.
ಶಾಸಕ ಸತೀಶ್ ಸೈಲ್ ಗೆ ಲಿವರ್ ಕಸಿ ಚಿಕಿತ್ಸೆ ಅಗತ್ಯವಿರುವ ಹಿನ್ನೆಲೆ ಜಾಮೀನು ನೀಡಲಾಗುತ್ತಿದೆ ಎಂದು ಹೈಕೋರ್ಟ್ ತಿಳಿಸಿದೆ. ಲಿವರ್ ಕಸಿಗೆ ಸಂಬಂಧಿಸಿದಂತೆ ಪ್ರತಿ ಎರಡು ವಾರಕ್ಕೊಮ್ಮೆ ವರದಿ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ. ಅಲ್ಲದೆ, ಎಂಟು ವಾರಗಳಿಗೊಮ್ಮೆ ಆರೋಗ್ಯದ ಸ್ಥಿತಿಗತಿಗಳ ಕುರಿತು ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದೆ.
ಇದೇ ವೇಳೆ, ಪ್ರಾಸಿಕ್ಯೂಷನ್ ಸಾಕ್ಷಿಗಳ ಮೇಲೆ ಯಾವುದೇ ರೀತಿಯ ಪ್ರಭಾವ ಬೀರುವಂತಿಲ್ಲ ಹಾಗೂ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗೆ ಅಡ್ಡಿಪಡಿಸಬಾರದು ಎಂದು ಹೈಕೋರ್ಟ್ ಷರತ್ತು ವಿಧಿಸಿದೆ. ಜಾಮೀನಿನ ಷರತ್ತಾಗಿ ಐದು ಲಕ್ಷ ರೂಪಾಯಿ ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಒಂದು ಭದ್ರತಾ ಖಾತರಿಯನ್ನು ಒದಗಿಸುವಂತೆ ಹೈಕೋರ್ಟ್ ಆದೇಶಿಸಿದೆ.



