ಬೆಂಗಳೂರು:- ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದ್ದು, ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸಬಹುದು. ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರು ಹಾಗೂ ಕರಾವಳಿ ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗಿದೆ.
ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಹ ಭಾರಿ ಮಳೆಯ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಹ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.
ಮಳೆ ಮತ್ತು ಗಾಳಿಯ ಕಾರಣ ಜನರು ಮರಗಳು, ವಿದ್ಯುತ್ ಕಂಬಗಳು ಮತ್ತು ಹಳೆಯ ಕಟ್ಟಡಗಳಿಂದ ದೂರವಿರಲು ಹವಾಮಾನ ಇಲಾಖೆ ಸಲಹೆ ನೀಡಿದೆ.



