ಬೆಂಗಳೂರು:- ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಮಳೆ ಆಗುವುದಾಗಿ ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
ಕೊಡಗಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಕೆಲ ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು ಜಿಲ್ಲೆಗಳಲ್ಲಿ 40-50ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ಇನ್ನುಳಿದ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಹಿನ್ನಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನ ಮೋಡ ಕವಿದ ವಾತಾವರಣ ಇದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. 30-40 ಕಿ.ಮೀ ನೊಂದಿಗೆ ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಟ ಮತ್ತು ಕನಿಷ್ಟ ತಾಪಮಾನ ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಮತ್ತು 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ಮಂಗಳೂರು ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ:
ಮಂಗಳೂರು ತಾಲೂಕಿನಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನಲೆ ಮಂಗಳೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಅಂಗನವಾಡಿಯಿಂದ ಪ್ರೌಢ ಶಾಲೆವರೆಗೆ ರಜೆ ಘೋಷಿಸಿ ಬಂಟ್ವಾಳ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.