ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು ದಕ್ಷಿಣ ಕನ್ನಡ, ಬಳ್ಳಾರಿ, ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿದೆ.
ಧಾರಾಕಾರ ಮಳೆಯಿಂದಾಗಿ ಹಲವು ಭಾಗಗಳಲ್ಲಿ ರಸ್ತೆಗಳು ಜಲಾವೃತಗೊಂಡಿದ್ದು, ಮನೆಗಳು, ಆಸ್ಪತ್ರೆಗಳು ಹಾಗೂ ಕಚೇರಿಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ.
ಈ ಮಧ್ಯೆ ಕೇಂದ್ರ ಹವಾಮಾನ ಇಲಾಖೆ (IMD) ರಾಜ್ಯಕ್ಕೆ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿದೆ. ಜೂನ್ 9ರಂದು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಿಗೆ ಹಾಗೂ ಜೂನ್ 10ರಂದು ಇಡೀ ಕರ್ನಾಟಕಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಜೂನ್ 9ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ಹಲವೆಡೆ ಈಗಾಗಲೇ ಮಳೆಯ ಅಬ್ಬರ ಹೆಚ್ಚಾಗಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮುಂದಿನ ಎರಡು ದಿನಗಳ ಕಾಲ ಹೆಚ್ಚಿನ ಮಳೆಯ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತಗಳು ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿವೆ. ಸಾರ್ವಜನಿಕರಿಗೆ ಅನಾವಶ್ಯಕವಾಗಿ ಮನೆಯಿಂದ ಹೊರಬಾರದಂತೆ ಮನವಿ ಮಾಡಲಾಗಿದೆ.



