ಬೆಂಗಳೂರು: ಮೂಡಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಸಂತ್ರಸ್ತೆಯನ್ನು ಭೇಟಿ ಮಾಡಿ ಹಲವು ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಪೊಲೀಸ್ ಇನ್ಸ್ಪೆಕ್ಟರ್ ಮೇಲೆ ಆರೋಪ ಹೊರಬಿದ್ದ ತಕ್ಷಣವೇ ಅವರನ್ನು ಅಮಾನತು ಮಾಡುವ ಮೂಲಕ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಸೂಚಿಸಲಾಗಿದ್ದು, ಮುಂದಿನ ವಿಚಾರಣೆ ಬಳಿಕ ಇನ್ನಷ್ಟು ಮಾಹಿತಿಗಳು ಬಹಿರಂಗವಾಗುವ ಸಾಧ್ಯತೆ ಇದೆ ಎಂದರು.
ತನಿಖೆ ಮುಂದುವರಿದಂತೆ ಇನ್ನಷ್ಟು ಸಂತ್ರಸ್ತರು ಇರುವ ಸಾಧ್ಯತೆಯೂ ಹೊರಬರುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಲು ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ ಎಂದು ಗೃಹ ಸಚಿವರು ಸ್ಪಷ್ಟಪಡಿಸಿದರು.



