ಚಿಕ್ಕಮಗಳೂರು: ಚಿಕ್ಕಮಗಳೂರು ನಗರದಲ್ಲಿ ಮತ್ತೆ ನೈತಿಕ ಪೊಲೀಸ್‌ಗಿರಿ ಪ್ರಕರಣ ಬೆಳಕಿಗೆ ಬಂದಿದೆ.
ನಗರದ ಸಹ್ಯಾದ್ರಿ ಕಾಲೇಜು ಬಸ್‌ನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯ ಪಕ್ಕದಲ್ಲಿ ಕುಳಿತಿದ್ದ ಕಾರಣಕ್ಕೆ ಇಬ್ಬರು ಹಿಂದೂ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಇಂದು ಬೆಳಗ್ಗೆ ಕಾಲೇಜಿಗೆ ತೆರಳುವ ವೇಳೆ ಯೋಗೇಶ್ ಹಾಗೂ ಜಯಂತ್ ಎಂಬ ವಿದ್ಯಾರ್ಥಿಗಳು ತಮ್ಮ ಸಹಪಾಠಿ ಮುಸ್ಲಿಂ ವಿದ್ಯಾರ್ಥಿನಿಯೊಂದಿಗೆ ಒಂದೇ ಸೀಟಿನಲ್ಲಿ ಕುಳಿತಿದ್ದರು. ಇದನ್ನು ಪ್ರಶ್ನಿಸಿದ ಸಾಲಿದ್ ಮತ್ತು ರಶೀದ್ ಎಂಬ ವಿದ್ಯಾರ್ಥಿಗಳು, ಯೋಗೇಶ್ ಮೇಲೆ ಹಲ್ಲೆ ನಡೆಸಿ ಮೊಬೈಲ್ ಕಿತ್ತುಕೊಂಡಿದ್ದಾರೆ. ಜಗಳ ತಡೆಯಲು ಮುಂದಾದ ಜಯಂತ್ ಮೇಲೂ ಹಲ್ಲೆ ಮಾಡಲಾಗಿದೆ ಎನ್ನಲಾಗಿದೆ.
ಎಲ್ಲರೂ ಒಂದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಸ್ನೇಹದ ನೆಲೆಯಲ್ಲಿ ಒಟ್ಟಿಗೆ ಕುಳಿತದ್ದೇ ಗಲಾಟೆಗೆ ಕಾರಣವಾಗಿದೆ. ಘಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಕಾಲೇಜು ಆಡಳಿತ ಮಂಡಳಿ ಬಸವನಹಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಬಂದು ಸಂಬಂಧಪಟ್ಟ ವಿದ್ಯಾರ್ಥಿಗಳನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದಾರೆ. ಒಂದೇ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ನಡುವಿನ ಸ್ನೇಹವನ್ನು ತಪ್ಪಾಗಿ ಅರ್ಥೈಸಿ ಹಲ್ಲೆಗೆ ಮುಂದಾಗಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ.



