ಬೆಂಗಳೂರು: ರಾಜ್ಯದ ಪೆಟ್ರೋಲ್ ಬಂಕ್ಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ವಿಚಾರ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಕರ್ನಾಟಕದ ಪೆಟ್ರೋಲ್ ಬಂಕ್ಗಳಿಂದ ಸಂಗ್ರಹಿಸಿದ ಮಾದರಿಗಳ ಪ್ರಯೋಗಾಲಯ ಪರೀಕ್ಷೆಯಲ್ಲಿ ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣವಾಗಿರುವುದು ಕಂಡುಬಂದಿದೆ ಎಂದು ಸಚಿವ ರಿಜ್ವಾನ್ ಅರ್ಷದ್ ಹೇಳಿದ್ದಾರೆ. ಈ ಸಂಬಂಧ ಪ್ರಯೋಗಾಲಯದ ವರದಿಗಳನ್ನು ಬಹಿರಂಗಪಡಿಸಿರುವ ಅವರು, ಕೇಂದ್ರ ಸರ್ಕಾರ ಹಾಗೂ ತೈಲ ಕಂಪನಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ವಿಕಾಸಸೌಧದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಿಜ್ವಾನ್ ಅರ್ಷದ್, ಪೆಟ್ರೋಲ್ಗೆ ಎಥೆನಾಲ್ ಮಿಶ್ರಣದ ಪ್ರಮಾಣವನ್ನು ತಿಳಿದುಕೊಳ್ಳಲು ರಾಜ್ಯ ಸರ್ಕಾರವೇ ಪ್ರಯೋಗಾಲಯ ಪರೀಕ್ಷೆ ನಡೆಸಿತ್ತು. ಈ ಪರೀಕ್ಷೆಯಲ್ಲಿ ಕೆಲವು ಪೆಟ್ರೋಲ್ ಮಾದರಿಗಳಲ್ಲಿ ನಿಗದಿತ ಶೇ.20ಕ್ಕಿಂತ ಹೆಚ್ಚಿನ ಪ್ರಮಾಣದ ಎಥೆನಾಲ್ ಇರುವುದು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ವರದಿಯನ್ನು ದೇಶದ ಜನರು ಗಂಭೀರವಾಗಿ ಪರಿಗಣಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಕೈಗೊಂಡ ಕ್ರಮಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ ಎಂದು ಸಚಿವರು ಹೇಳಿದ್ದಾರೆ.
ಆದರೆ ಇಷ್ಟೊಂದು ಗಂಭೀರವಾದ ವಿಚಾರದ ಬಗ್ಗೆ ಕೇಂದ್ರ ಸರ್ಕಾರವೇ ಸ್ಪಷ್ಟನೆ ನೀಡಬೇಕಿತ್ತು. ರಾಜ್ಯ ಸರ್ಕಾರದಿಂದ ಮಾಹಿತಿ ಪಡೆದು ಸೂಕ್ತ ಉತ್ತರ ನೀಡುವ ಜವಾಬ್ದಾರಿ ಕೇಂದ್ರ ಸರ್ಕಾರದ್ದಾಗಿತ್ತು. ಆದರೆ ಇದುವರೆಗೂ ಕೇಂದ್ರ ಸರ್ಕಾರದ ವತಿಯಿಂದ ಯಾವುದೇ ಉತ್ತರ ಬಂದಿಲ್ಲ. ಬದಲಾಗಿ ತೈಲ ಕಂಪನಿಗಳು ಮಾತ್ರ ಪ್ರತಿಕ್ರಿಯೆ ನೀಡುತ್ತಿವೆ ಎಂದು ರಿಜ್ವಾನ್ ಅರ್ಷದ್ ಆರೋಪಿಸಿದ್ದಾರೆ.
ತೈಲ ಕಂಪನಿಗಳು ನೀಡುತ್ತಿರುವ ಸ್ಪಷ್ಟನೆಯ ಬಗ್ಗೆಯೂ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಂಪನಿಗಳು ಕೇವಲ ತಾಂತ್ರಿಕ ವಿಚಾರಗಳನ್ನೇ ಪ್ರಸ್ತಾಪಿಸುತ್ತಿವೆ. ಆದರೆ ಪೆಟ್ರೋಲ್ನಲ್ಲಿ ನಿಖರವಾಗಿ ಎಷ್ಟು ಪ್ರಮಾಣದ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ಪ್ರಮುಖ ಪ್ರಶ್ನೆಗೆ ಉತ್ತರ ನೀಡುತ್ತಿಲ್ಲ ಎಂದು ಹೇಳಿದ್ದಾರೆ.
ಪೆಟ್ರೋಲ್ ಬಂಕ್ಗಳಲ್ಲಿ ಎಥೆನಾಲ್ ಮಿಶ್ರಣದ ಪ್ರಮಾಣ ಹೆಚ್ಚಾಗಿರುವ ವಿಚಾರಕ್ಕೆ ಡೀಲರ್ಗಳನ್ನು ಹೊಣೆಗಾರರನ್ನಾಗಿ ಮಾಡಲು ಸಾಧ್ಯವಿಲ್ಲ. ಏಕೆಂದರೆ ಪೆಟ್ರೋಲ್ ಬಂಕ್ಗಳ ಡೀಲರ್ಗಳು ಎಥೆನಾಲ್ ಮಿಶ್ರಣ ಮಾಡುವುದಿಲ್ಲ. ಈ ಪ್ರಕ್ರಿಯೆ ತೈಲ ಕಂಪನಿಗಳ ನಿಯಂತ್ರಣದಲ್ಲಿಯೇ ನಡೆಯುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
ಎಥೆನಾಲ್ ಮಿಶ್ರಣವು ನಿಯಂತ್ರಿತ ಹಾಗೂ ಸ್ವಯಂಚಾಲಿತ ಪ್ರಕ್ರಿಯೆ ಎಂದು ತೈಲ ಕಂಪನಿಗಳೇ ಹೇಳುತ್ತಿವೆ. ಕರ್ನಾಟಕದಲ್ಲಿ ಒಟ್ಟು ಆರು ಟರ್ಮಿನಲ್ಗಳಿದ್ದು, ಆರು ಸ್ಥಳಗಳಲ್ಲಿ ಪೆಟ್ರೋಲ್ಗೆ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ. ಹೀಗಿರುವಾಗ ನಿಗದಿಗಿಂತ ಹೆಚ್ಚಿನ ಎಥೆನಾಲ್ ಮಿಶ್ರಣವಾಗುತ್ತಿದ್ದರೆ ಅದಕ್ಕೆ ತೈಲ ಕಂಪನಿಗಳೇ ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಈ ಸಮಸ್ಯೆಯನ್ನು ಪೆಟ್ರೋಲ್ ಬಂಕ್ಗಳ ಡೀಲರ್ಗಳ ಮೇಲೆ ಹಾಕುವುದು ಸರಿಯಲ್ಲ. ಎಥೆನಾಲ್ ಮಿಶ್ರಣದ ಸಂಪೂರ್ಣ ಪ್ರಕ್ರಿಯೆ ತೈಲ ಕಂಪನಿಗಳ ನಿಯಂತ್ರಣದಲ್ಲಿರುವುದರಿಂದ, ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಮಿಶ್ರಣವಾಗಿರುವುದಕ್ಕೆ ಕಂಪನಿಗಳೇ ಸ್ಪಷ್ಟನೆ ನೀಡಬೇಕೆಂದು ಸಚಿವ ರಿಜ್ವಾನ್ ಅರ್ಷದ್ ಒತ್ತಾಯಿಸಿದ್ದಾರೆ.









