ಬೀದರ್:- ಜಿಲ್ಲೆಯ ಔರಾದ್ ತಾಲೂಕಿನ ಜಮಲಪೂರ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಏಕಾಏಕಿ ಅಸ್ವಸ್ಥಗೊಂಡಿರುವ ಘಟನೆ ಮಂಗಳವಾರ ನಡೆದಿದೆ.
ಶಾಲೆಯಲ್ಲಿ ಎಂದಿನಂತೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಬಡಿಸಲಾಗಿತ್ತು. ಊಟ ಸೇವಿಸಿದ ಕೆಲವೇ ನಿಮಿಷಗಳಲ್ಲಿ ಮಕ್ಕಳಿಗೆ ವಾಂತಿ ಹಾಗೂ ಬೇಧಿ ಕಾಣಿಸಿಕೊಂಡಿದ್ದು, ಕೆಲವರು ತೀವ್ರ ಅಸ್ವಸ್ಥಗೊಂಡಿದ್ದಾರೆ. ಇದರಿಂದ ಆತಂಕಗೊಂಡ ಶಿಕ್ಷಕರು ಹಾಗೂ ಪೋಷಕರು ತಕ್ಷಣವೇ ಎಲ್ಲಾ ಮಕ್ಕಳನ್ನು ಔರಾದ್ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಪರಿಶೀಲನೆ ವೇಳೆ ಅನ್ನದಲ್ಲಿ ಹುಳುಗಳು ಪತ್ತೆಯಾಗಿರುವುದು ಪೋಷಕರ ಹಾಗೂ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಅಡುಗೆ ಪದಾರ್ಥಗಳನ್ನು ಸರಿಯಾಗಿ ಸ್ವಚ್ಛಗೊಳಿಸದ ಅಡುಗೆ ಸಿಬ್ಬಂದಿಯ ನಿರ್ಲಕ್ಷ್ಯವೇ ಈ ಅವಾಂತರಕ್ಕೆ ಕಾರಣ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಭೇಟಿ ನೀಡಿದ ತಹಶೀಲ್ದಾರ್ ಹಾಗೂ ಬಿಇಒ ಮಕ್ಕಳು ಪಡೆದಿರುವ ಚಿಕಿತ್ಸೆಯ ಬಗ್ಗೆ ಮಾಹಿತಿ ಪಡೆದು ಆರೋಗ್ಯ ವಿಚಾರಿಸಿದರು. ಸದ್ಯ ಎಲ್ಲಾ ಮಕ್ಕಳು ಚೇತರಿಸಿಕೊಳ್ಳುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು ಮತ್ತು ಗ್ರಾಮಸ್ಥರು, ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿಯ ನಿರ್ಲಕ್ಷ್ಯದ ವಿರುದ್ಧ ಶಿಕ್ಷಣ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.



