ಬೀದರ್: ಸಂತಾನಹರಣ ಶಸ್ತ್ರಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿಯೊಬ್ಬರು ಮೃತಪಟ್ಟಿರುವ ಘಟನೆ ಬೀದರ್ನಲ್ಲಿ ಸಂಭವಿಸಿದೆ.
ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಮೃತಳ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಚಿಮಕೋಡ್ ಗ್ರಾಮದ 26 ವರ್ಷದ ಮೀನಾಕ್ಷಿ ಮೃತಪಟ್ಟ ಬಾಣಂತಿ. ಮಂಗಳವಾರ (ಜ.20) ಅವರು ಸಂತಾನಹರಣ ಶಸ್ತ್ರಚಿಕಿತ್ಸೆಗಾಗಿ ಬೀದರ್ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆಯ ನಂತರ ಶೌಚಾಲಯಕ್ಕೆ ತೆರಳುವ ವೇಳೆ ಮೀನಾಕ್ಷಿ ಕುಸಿದು ಬಿದ್ದಿದ್ದಾರೆ. ಈ ವೇಳೆ ಆಸ್ಪತ್ರೆಯ ವೈದ್ಯರು ಇಂಜೆಕ್ಷನ್ ನೀಡಿದ್ದು, ಬಳಿಕ ಅವರ ಆರೋಗ್ಯದಲ್ಲಿ ಮತ್ತಷ್ಟು ಏರುಪೇರಾಗಿದೆ ಎನ್ನಲಾಗಿದೆ.
ಸ್ಥಿತಿ ಗಂಭೀರವಾಗುತ್ತಿದ್ದಂತೆ ಅವರನ್ನು ಬ್ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಂತೆ ಖಾಸಗಿ ಆಸ್ಪತ್ರೆಯವರು ಸೂಚಿಸಿದ್ದಾರೆ. ಆದರೆ ಬ್ರಿಮ್ಸ್ ಆಸ್ಪತ್ರೆಗೆ ತಲುಪಿದಾಗ ವೈದ್ಯರು ಪರಿಶೀಲನೆ ನಡೆಸಿ ಮೀನಾಕ್ಷಿ ಈಗಾಗಲೇ ಸಾವನ್ನಪ್ಪಿರುವುದಾಗಿ ಘೋಷಿಸಿದ್ದಾರೆ. ಈ ಘಟನೆಯಿಂದ ಆಕ್ರೋಶಗೊಂಡ ಮೃತಳ ಕುಟುಂಬಸ್ಥರು ಖಾಸಗಿ ಆಸ್ಪತ್ರೆಯ ಎದುರು ಶವವಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದಲೇ ಮೀನಾಕ್ಷಿಯ ಸಾವು ಸಂಭವಿಸಿದೆ ಎಂದು ಆರೋಪಿಸಿ, ಪ್ರಕರಣಕ್ಕೆ ನ್ಯಾಯ ಒದಗಿಸಬೇಕು ಹಾಗೂ ಹೊಣೆಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.



