ಕೋಲಾರ: ಕೋಲಾರದ ಬಂಗಾರಪೇಟೆ ತಾಲೂಕಿನ ಜಿಗ್ ಜಾಗ್ ರಸ್ತೆಯ ಬಳಿ ಮದುವೆಗೆ ಒಪ್ಪದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಕತ್ತಹಳ್ಳಿ ಗ್ರಾಮದ ಸುಜಾತ (27) ಎಂದು ಗುರುತಿಸಲಾಗಿದೆ.
ಆರೋಪಿ ಚಿರಂಜೀವಿ ಹೊಸಕೋಟೆಯ ಇಂಡಸ್ ಬ್ಯಾಂಕ್ ಉದ್ಯೋಗಿಯಾಗಿದ್ದು, ಈ ಹಿಂದೆ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಣ ವಸೂಲಿಗೆ ಹೋಗುವ ಸಂದರ್ಭದಲ್ಲಿ ಸುಜಾತ ಪರಿಚಯವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಚಿರಂಜೀವಿ ಸುಜಾತಳನ್ನು ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದನು. ಆದರೆ ಸುಜಾತ ನಿರಾಕರಿಸಿದ್ದಳು.
ಸುಜಾತ ಗಂಡನಿಂದ ಪ್ರತ್ಯೇಕವಾಗಿ ವಾಸವಾಗುತ್ತಿದ್ದು, ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಸ್ಟಾಫ್ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು. ಕೆಲಸಕ್ಕೆ ಹೊರಟ ಸಮಯದಲ್ಲಿ ಕೋಲಾರದ ಬಳಿ ಆರೋಪಿ ಆಕೆಯನ್ನು ಅಡ್ಡಗಟ್ಟಿ ಚಾಕು ಇರಿದು ಹತ್ಯೆ ನಡೆಸಿದ್ದಾನೆ ಎನ್ನಲಾಗಿದೆ.
ಈ ಹಿಂದೆಯೂ ಹಣಕಾಸು ವಿಚಾರಕ್ಕೆ ಸಂಬಂಧಿಸಿ ಸುಜಾತ ಮೇಲೆ ಹಲ್ಲೆ ನಡೆದಿದ್ದು, ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆದರೆ ಸಮರ್ಪಕ ಕ್ರಮ ಕೈಗೊಳ್ಳದ ಕಾರಣ ಇದೀಗ ದುರ್ಘಟನೆ ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಸ್ಥಳೀಯರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.



