ಧಾರವಾಡ:- ಒಂದೆಡೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣ, ಹಾಗೂ ಇನ್ನೊಂದೆಡೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕರ್ನಾಟಕ ಹೈಕೋರ್ಟ್ ನ ಧಾರವಾಡ ಪೀಠ ಮಹತ್ವದ ತೀರ್ಪು ಪ್ರಕಟಿಸಿದೆ.
ಮೊದಲಿಗೆ ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ, ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದೆ. ಲೋಕಾಯುಕ್ತ ಪೊಲೀಸರ ತನಿಖೆ ಅಸಮರ್ಪಕ ಎನ್ನುವುದಕ್ಕೆ ಕಾರಣಗಳಿಲ್ಲ, ಲೋಕಾಯುಕ್ತ ತನಿಖೆ ತಾರತಮ್ಯಪೂರಿತ ಎಂಬುದಕ್ಕೆ ಆಧಾರಗಳಿಲ್ಲ. ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ ಎಂದು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಪ್ರಕರಣವನ್ನು ಸಿಬಿಐಗೆ ನೀಡಲು ನಿರಾಕರಿಸಿ ಆದೇಶ ಹೊರಡಿಸಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಇನ್ನೂ ಮತ್ತೊಂದೆಡೆ ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಧಾರವಾಡ ಹೈಕೋರ್ಟ್ ಪೀಠ ಇಂದು ಆದೇಶ ಹೊರಡಿಸಿದೆ.
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಮುಗಿದಿದ್ದು, ಇಂದಿಗೆ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಅದರಂತೆ ಇದೀಗ ಧಾರವಾಡ ಹೈಕೋರ್ಟ್ ಪೀಠ, ಪ್ರಕರಣ ರದ್ದುಪಡಿಸಲು ನಿರಾಕರಿಸಿದ್ದು, ಕೇವಲ ನಿರೀಕ್ಷಣಾ ಜಾಮೀನು ನೀಡಿದೆ. ಹೀಗಾಗಿ ಯಡಿಯೂರಪ್ಪ ಬಂಧನದಿಂದ ಪಾರಾಗಿದ್ದಾರೆ ಹೊರತೂ ವಿಚಾರಣೆ ಎದುರಿಸಲೇಬೇಕಾಗಿದೆ. ಇದರಿಂದ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ ಅಷ್ಟೇ. ಆದ್ರೆ ಕಷ್ಟ ತಪ್ಪಿಲ್ಲ ಎನ್ನಲಾಗಿದೆ.