ಬೆಂಗಳೂರು/ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ನೀಡಿದ್ದ ಕ್ಲೀನ್ಚಿಟ್ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ನಾಲ್ವರ ವಿರುದ್ಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ–ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್ ಮೆಟ್ಟಿಲೇರಿದ್ದರು.
ಈ ಅರ್ಜಿಯ ವಾದ–ಪ್ರತಿವಾದಗಳನ್ನು ಆಲಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಲೋಕಾಯುಕ್ತ ಸಲ್ಲಿಸಿದ್ದ ಬಿ–ರಿಪೋರ್ಟ್ ಅನ್ನು ಪುರಸ್ಕರಿಸಿ, ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಇಂದು (ಜನವರಿ 22) ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ದೊಡ್ಡ ರಿಲೀಫ್ ದೊರೆತಂತಾಗಿದೆ.
ಲೋಕಾಯುಕ್ತ ತನಿಖೆ ಮತ್ತು ಬಿ–ರಿಪೋರ್ಟ್
ಮುಡಾ ಹಗರಣದ ಸಂಬಂಧ ಲೋಕಾಯುಕ್ತ ನಡೆಸಿದ್ದ ತನಿಖೆಯಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನು ಮಾಲೀಕ ದೇವರಾಜು ವಿರುದ್ಧ ಯಾವುದೇ ಅಪರಾಧ ಸಾಬೀತಾಗಿಲ್ಲ ಎಂದು ಹೇಳಿ ಬಿ–ರಿಪೋರ್ಟ್ ಸಲ್ಲಿಸಿತ್ತು.
ಆದರೆ ಈ ಬಿ–ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯಗೆ ರಾಜಕೀಯವಾಗಿ ಒತ್ತಡ ಹೆಚ್ಚಾಗಿತ್ತು. ಆದರೆ ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತ ಬಿ–ರಿಪೋರ್ಟ್ ಪುರಸ್ಕರಿಸಿ ಅರ್ಜಿಯನ್ನು ವಜಾಗೊಳಿಸಿದೆ.
ರಾಜಕೀಯ ವಲಯದಲ್ಲಿ ಚರ್ಚೆ
ತಮ್ಮ ರಾಜಕೀಯ ಜೀವನದಲ್ಲಿ ಸಿಎಂ ಸಿದ್ದರಾಮಯ್ಯ ‘ಕ್ಲೀನ್ ಹ್ಯಾಂಡ್’ ರಾಜಕಾರಣಿ ಎಂಬ ಹೆಸರು ಪಡೆದಿದ್ದರು. ಆದರೆ ಮುಡಾ ಹಗರಣ ಅವರ ವಿರುದ್ಧ ಆರೋಪಗಳೊಂದಿಗೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಇದೀಗ ಕೋರ್ಟ್ ಆದೇಶದ ಮೂಲಕ ಪ್ರಕರಣಕ್ಕೆ ತಾತ್ಕಾಲಿಕ ವಿರಾಮ ಸಿಕ್ಕಿದ್ದು, ಸಿಎಂ ಸಿದ್ದರಾಮಯ್ಯ ನಿರಾಳರಾದಂತಾಗಿದೆ.



