ಬೆಂಗಳೂರು: ರಾಜ್ಯ ರಾಜಕೀಯದ ಬಹುಚರ್ಚಿತ ಬೆಳವಣಿಗೆಗೆ ಕೊನೆಗೂ ಅಂತಿಮ ಮುದ್ರೆ ಬಿದ್ದಿದ್ದು, ಡಿ.ಕೆ. ಶಿವಕುಮಾರ್ ಅವರು ಜೂನ್ 3ರಂದು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬುಧವಾರ ಸಂಜೆ 4 ಗಂಟೆಯ ಬಳಿಕ ವಿಧಾನಸೌಧದ ಭವ್ಯ ಗ್ರ್ಯಾಂಡ್ ಸ್ಟೆಪ್ ಮುಂಭಾಗದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ನಾಯಕತ್ವದ ಅಂತಿಮ ಚರ್ಚೆಗಳ ಬಳಿಕ ಕಾರ್ಯಕ್ರಮದ ರೂಪುರೇಷೆಗಳು ಬಹುತೇಕ ಅಂತಿಮಗೊಂಡಿವೆ.
ಇದರ ನಡುವೆಯೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಡಿಕೆ ಶಿವಕುಮಾರ್ ಅವರು ರಾಜ್ಯಪಾಲರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ. ರಾಜ್ಯಪಾಲರು ಧರ್ಮಸ್ಥಳ ಪ್ರವಾಸಕ್ಕೆ ತೆರಳಲಿರುವ ಹಿನ್ನೆಲೆಯಲ್ಲಿ ಮುಂಚಿತವಾಗಿಯೇ ಭೇಟಿಯಾಗಿ ರಾಜಕೀಯ ಬೆಳವಣಿಗೆಗಳ ಕುರಿತು ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ.
ಡಿಕೆ ಶಿವಕುಮಾರ್ ಭೇಟಿ ಹಿನ್ನೆಲೆ ಲೋಕಭವನದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು, ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.



