ಕೋಲಾರ: ಜಿಲ್ಲೆಯ ಮುಳಬಾಗಿಲು ನಗರದಲ್ಲಿ ಸಂಭವಿಸಿದ ಭೀಕರ ಮನೆ ಕುಸಿತ ದುರಂತವು ಆತಂಕ ಸೃಷ್ಟಿಸಿದೆ. ಜೀರ್ಣಾವಸ್ಥೆಯಲ್ಲಿದ್ದ ಹಳೆಯ ಕಟ್ಟಡ ಏಕಾಏಕಿ ಕುಸಿದು ಬಿದ್ದ ಪರಿಣಾಮ 15 ವರ್ಷದ ವಹಿನೂರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ತೀವ್ರತೆಯಲ್ಲಿ ಸುಹೇಲ್, ಕೌಸರ್, ಅಯಾಜ್ ಹಾಗೂ ಅಬ್ಜರ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಕಟ್ಟಡದ ದುರ್ಬಲ ಸ್ಥಿತಿಯೇ ಅವಘಡಕ್ಕೆ ಪ್ರಮುಖ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಈ ಘಟನೆ ಸ್ಥಳೀಯರಲ್ಲಿ ಭೀತಿ ಹುಟ್ಟಿಸಿದ್ದು, ಹಳೆಯ ಕಟ್ಟಡಗಳ ಸುರಕ್ಷತೆ ಕುರಿತು ಪ್ರಶ್ನೆಗಳು ಮತ್ತೆ ಉದ್ಭವಿಸಿವೆ.
ಮುಳಬಾಗಿಲು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ತನಿಖೆಯನ್ನು ವೇಗಗೊಳಿಸಿದ್ದಾರೆ.



