ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ಹಾಗೂ ಶಿಕ್ಷೆ ಅಮಾನತು ಕೋರಿ ಸಲ್ಲಿಸಿರುವ ಮಧ್ಯಂತರ ಅರ್ಜಿಗೆ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ಜೀವಾವಧಿ ಶಿಕ್ಷೆಯ ಆದೇಶವನ್ನು ರದ್ದುಪಡಿಸುವಂತೆ ವಿನಯ್ ಕುಲಕರ್ಣಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಜೊತೆಗೆ ಶಿಕ್ಷೆಯನ್ನು ತಾತ್ಕಾಲಿಕವಾಗಿ ಅಮಾನತಿನಲ್ಲಿಟ್ಟು ಜಾಮೀನು ನೀಡುವಂತೆ ಮಧ್ಯಂತರ ಮನವಿ ಮಾಡಿದ್ದಾರೆ.
ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಹಾಗೂ ನ್ಯಾಯಮೂರ್ತಿ ಜಿ. ಬಸವರಾಜ ಅವರ ಪೀಠ, ವಿನಯ್ ಕುಲಕರ್ಣಿ ಪರ ಹಾಗೂ ಸಿಬಿಐ ಪರ ವಕೀಲರ ವಾದ ಆಲಿಸಿ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ಇಂದು ಆದೇಶ ಪ್ರಕಟವಾಗಲಿದೆ.
ಜೀವಾವಧಿ ಶಿಕ್ಷೆ ವಿಧಿಸಿದ್ದ ನ್ಯಾಯಾಲಯ
2016ರಲ್ಲಿ ನಡೆದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿ ಸೇರಿದಂತೆ ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿತ್ತು. ಬಳಿಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಮತ್ತೊಬ್ಬ ಆರೋಪಿಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.
ಈ ಆದೇಶ ಪ್ರಶ್ನಿಸಿ ವಿನಯ್ ಕುಲಕರ್ಣಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಶಿಕ್ಷೆ ಮುಂದುವರಿದರೆ ಶಾಸಕ ಸ್ಥಾನಕ್ಕೆ ಪರಿಣಾಮ ಬೀರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶ ಮಹತ್ವ ಪಡೆದುಕೊಂಡಿದೆ.
ಏನಿದು ಯೋಗೀಶ್ ಗೌಡ ಕೊಲೆ ಪ್ರಕರಣ?
2016ರ ಜೂನ್‌ನಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೀಶ್ ಗೌಡ ಅವರನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ 21 ಮಂದಿಯ ವಿರುದ್ಧ ಆರೋಪ ಕೇಳಿಬಂದಿತ್ತು.
ಬಳಿಕ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದ್ದು, ತನಿಖೆ ನಡೆಸಿದ ಸಿಬಿಐ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿತ್ತು. ವಿಚಾರಣೆ ಬಳಿಕ ಕೆಲ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದ್ದು, ಉಳಿದ ಆರೋಪಿಗಳಿಗೆ ಶಿಕ್ಷೆ ವಿಧಿಸಲಾಗಿತ್ತು.
ಇದೀಗ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ಕುರಿತು ಹೈಕೋರ್ಟ್ ನೀಡುವ ಆದೇಶದತ್ತ ರಾಜ್ಯದ ರಾಜಕೀಯ ವಲಯದ ಗಮನ ನೆಟ್ಟಿದೆ.



