ಮಂಗಳೂರು:- ನಗರದಲ್ಲಿ ಮಂಗಳವಾರ ನಡೆದಿದ್ದ ಮುಸ್ಲಿಂ ಯುವಕ ರಹೀಂ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ಬಂಟ್ವಾಳ ರಸ್ತೆಯಲ್ಲಿ ನೂರಾರು ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಬಂಟ್ವಾಳದ ರಹೀಂ ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಬಂಟ್ವಾಳದವರೆಗಿನ ನೂರಾರು ಅಂಗಡಿಗಳನ್ನು ಮಾಲೀಕರು ಸ್ವಯಂಪ್ರೇರಿತವಾಗಿ ಬಂದ್ ಮಾಡಿದ್ದಾರೆ.
ಇನ್ನೂ ಅಬ್ದುಲ್ ರಹೀಂ ಅವರ ಮೃತದೇಹವನ್ನು ಕೊಳತ್ತಮಜಲಿಗೆ ಇಂದು ಬೆಳಗ್ಗೆ ಸಾಗಿಸಲಾಯಿತು. ಕುತ್ತಾರ್ ಮದನಿ ನಗರ ಮಸೀದಿಯಲ್ಲಿ ರಹೀಂ ಅವರ ಮಯ್ಯತ್ ಸ್ನಾನ ಮಾಡಲಾಯಿತು. ನಂತರ ಮಯ್ಯತ್ ನಮಾಝ್ ಬಳಿಕ ಪೊಲೀಸ್ ಬಂದೋಬಸ್ತ್‌ನಲ್ಲಿ ಮೃತದೇಹವನ್ನು ಮೆರವಣಿಗೆಯ ಮೂಲಕ ಸಾಗಿಸಲಾಯಿತು. ಈ ವೇಳೆ ನೂರಾರು ಜನ ಸೇರಿದ್ದರು. ಅಲ್ಲದೇ ಹತ್ಯೆ ಖಂಡಿಸಿ ಮಂಗಳೂರಿನಿಂದ ಬಂಟ್ವಾಳದವರೆಗೆ ಅಂಗಡಿಗಳ ಮುಂಗಟ್ಟುಗಳು ಬಂದ್ ಮಾಡಿ ಮುಸ್ಲಿಮ್ ವ್ಯಾಪಾರಿಗಳು ಸಹ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ವಿಪರೀತ ಮಳೆಯ ನಡುವೆ ರಹೀಂ ಮೃತ ದೇಹ ರವಾನೆ ಮಾಡಲಾಗಿದ್ದು, ಪ್ರಮುಖ ಜಂಕ್ಷನ್‌ಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.