ಬೆಂಗಳೂರು: ಬೆಂಗಳೂರು ನಗರವನ್ನು ರಾಷ್ಟ್ರಮಟ್ಟ ಮಾತ್ರವಲ್ಲದೆ ಅಂತರರಾಷ್ಟ್ರೀಯ ಮಟ್ಟದಲ್ಲೂ ಗುರುತಿಸುವಂತೆ ಮಾಡಿದ ಶ್ರೇಯಸ್ಸು ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಸದಾಶಿವನಗರದ ಕೆಂಪೇಗೌಡ ಗಡಿ ಗೋಪುರ ಉದ್ಯಾನವನದಲ್ಲಿ ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ಆಯೋಜಿಸಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಸಮಾಜಸೇವಕ ಆರ್.ಪಿ. ರವಿಶಂಕರ್ ಅವರನ್ನು ಸನ್ಮಾನಿಸಿ ಮಾತನಾಡಿದ ಅವರು,
517 ವರ್ಷಗಳ ಬಳಿಕವೂ ಕೆಂಪೇಗೌಡರನ್ನು ನಾವು ಸ್ಮರಿಸುತ್ತಿದ್ದೇವೆ ಎಂದರೆ, ಬೆಂಗಳೂರು ಹಾಗೂ ನಾಡಿಗೆ ಅವರು ನೀಡಿರುವ ಕೊಡುಗೆ ಎಷ್ಟೊಂದು ಮಹತ್ತರ ಎಂಬುದನ್ನು ಅರ್ಥಮಾಡಿಕೊಳ್ಳಬಹುದು ಎಂದು ಹೇಳಿದರು.
ನಾಡಪ್ರಭು ಕೆಂಪೇಗೌಡರ ಹೆಸರನ್ನು ಕರ್ನಾಟಕ ಮಾತ್ರವಲ್ಲದೆ ದೇಶ ಹಾಗೂ ವಿಶ್ವದಾದ್ಯಂತ ಪರಿಚಯಿಸುವ ಉದ್ದೇಶದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧ್ಯಯನ ಕೇಂದ್ರಕ್ಕೆ 50 ಕೋಟಿ ರೂಪಾಯಿ ಅನುದಾನ ನೀಡಿದ್ದರು ಎಂದು ವಿಜಯೇಂದ್ರ ತಿಳಿಸಿದರು.
ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಮಾತ್ರವಲ್ಲದೆ ಉದ್ಯಾನವನ ನಿರ್ಮಾಣಕ್ಕೂ ಯಡಿಯೂರಪ್ಪ ಅವರು ವಿಶೇಷ ಆದ್ಯತೆ ನೀಡಿದ್ದರು. ಅಲ್ಲದೆ, ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರನ್ನೇ ಇಡಬೇಕು ಎಂಬ ಮಹತ್ವದ ನಿರ್ಧಾರವನ್ನೂ ಅವರೇ ಕೈಗೊಂಡಿದ್ದರು ಎಂದು ಹೇಳಿದರು.



