ವಿಜಯಸಾಕ್ಷಿ ಸುದ್ದಿ, ಗದಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಜುಲೈ 11ರಂದು ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ‘ನಮ್ಮಭಿಮಾನ’ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 25 ಸಾವಿರಕ್ಕೂ ಹೆಚ್ಚು ಸರ್ಕಾರಿ ನೌಕರರು ಭಾಗವಹಿಸಲಿದ್ದಾರೆ ಎಂದು ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಗದಗ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಬಸವರಾಜ ಬಳ್ಳಾರಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗದಗ ಜಿಲ್ಲೆಯಿಂದ ಸಾವಿರಕ್ಕೂ ಹೆಚ್ಚು ನೌಕರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಜಿಲ್ಲೆಯ ಎಲ್ಲ ತಾಲೂಕುಗಳಿಂದ ಸುಮಾರು 12 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಇನ್ನೂ ಹಲವರು ಖಾಸಗಿ ವಾಹನ ಹಾಗೂ ರೈಲಿನ ಮೂಲಕ ಕಾರ್ಯಕ್ರಮಕ್ಕೆ ಬರಲಿದ್ದಾರೆ ಎಂದು ಹೇಳಿದರು.
ಅಭಿನಂದನಾ ಸಮಾರಂಭದಲ್ಲಿ ಎನ್‌ಪಿಎಸ್ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ (ಒಪಿಎಸ್) ಮರುಜಾರಿ, 8ನೇ ವೇತನ ಆಯೋಗದ ಶಿಫಾರಸುಗಳ ಜಾರಿ, ಕೇಂದ್ರ ಸರ್ಕಾರಿ ನೌಕರರಿಗೆ ದೊರೆಯುವ ವೇತನ ಹಾಗೂ ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ವಿಸ್ತರಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಒಳಗೊಂಡ ಮನವಿಪತ್ರವನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಹಾಗೂ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ದಿವ್ಯಸಾನ್ನಿಧ್ಯ ವಹಿಸಲಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿರುವ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು. ರಾಜ್ಯದ ಸುಮಾರು 10 ಜಿಲ್ಲೆಗಳ 3 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಸಮಾರಂಭದಲ್ಲಿ ಸನ್ಮಾನಕ್ಕೆ ಪಾತ್ರರಾಗಲಿದ್ದು, ರಾಜ್ಯಾದ್ಯಂತ 11 ಸಾವಿರ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಗದಗ ಜಿಲ್ಲೆಯಿಂದ 148 ವಿದ್ಯಾರ್ಥಿಗಳಿಗೆ ತಲಾ ₹2 ಸಾವಿರ ನಗದು ಬಹುಮಾನ ನೀಡಿ ಗೌರವಿಸಲಾಗುವುದು ಎಂದು ಮಾಹಿತಿ ನೀಡಿದರು.
ರಾಜ್ಯದ ವಿವಿಧ ಇಲಾಖೆಗಳ ಸಾವಿರಾರು ನೌಕರರು, ಪದಾಧಿಕಾರಿಗಳು ಹಾಗೂ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ನೌಕರರ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಡಿ.ಎಸ್. ತಳವಾರ, ಎಂ.ಎಂ. ನಿಟ್ಟಾಲಿ, ಸಿದ್ದಪ್ಪ ಲಿಂಗದಾಳ, ರಾಜು ಕಂಟಿಗೊನ್ನನವರ, ಮುತ್ತು ಮಲಕಶೆಟ್ಟಿ, ಸಂಜೀವಕುಮಾರ ಕುಂದಗೋಳ, ಶರಣು ಸಂಗದಾಳ ಹಾಗೂ ಐ.ಎ. ಗಾಡಗೋಳಿ ಉಪಸ್ಥಿತರಿದ್ದರು.
“ಎಸ್‌ಐಆರ್ ಸಮೀಕ್ಷಾ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿಯ ಮೇಲೆ ಅನಗತ್ಯ ಒತ್ತಡ ಬೀಳದಂತೆ ಸರ್ಕಾರ ಹಾಗೂ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು. ವಾಸ್ತವಿಕ ಪರಿಸ್ಥಿತಿಗೆ ಅನುಗುಣವಾಗಿ ಕಾರ್ಯದಿನಗಳನ್ನು ನಿಗದಿಪಡಿಸಬೇಕು. ಕರ್ತವ್ಯಕ್ಕೆ ಅಡ್ಡಿಪಡಿಸುವ ಯಾವುದೇ ವ್ಯಕ್ತಿ ಅಥವಾ ಸಂಘಟನೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು.”
— ಡಾ. ಬಸವರಾಜ ಬಳ್ಳಾರಿ
ರಾಜ್ಯ ಉಪಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಗದಗ ಜಿಲ್ಲಾಧ್ಯಕ್ಷರು



