ಬೆಂಗಳೂರು: ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಮತ್ತು ಭದ್ರತಾ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ₹5.87 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಇಬ್ಬರು ಪ್ರಯಾಣಿಕರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.
ಬೆಳ್ಳಂಬೆಳಿಗ್ಗೆ ನಡೆದ ತಪಾಸಣೆ ವೇಳೆ ಬ್ಯಾಂಕಾಕ್ನಿಂದ ಬೆಂಗಳೂರಿಗೆ ಆಗಮಿಸಿದ್ದ ಪ್ರಯಾಣಿಕರ ಚಲನವಲನ ಅನುಮಾನಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಅವರನ್ನು ತಡೆದು ಪರಿಶೀಲನೆ ನಡೆಸಿದರು. ಈ ವೇಳೆ ಅವರ ಬಳಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಮಾದಕ ವಸ್ತು ಪತ್ತೆಯಾಗಿದೆ.
ಕಾರ್ಯಾಚರಣೆಯಲ್ಲಿ ಒಟ್ಟು 16 ಕೆಜಿ 880 ಗ್ರಾಂ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಮಾರುಕಟ್ಟೆ ಮೌಲ್ಯ ಸುಮಾರು ₹5.87 ಕೋಟಿ ಎಂದು ಅಂದಾಜಿಸಲಾಗಿದೆ.
ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಈ ಮಾದಕ ವಸ್ತು ಜಪ್ತಿಯಾಗಿದ್ದು, ಸಂಬಂಧಿತ ಇಬ್ಬರು ಪ್ರಯಾಣಿಕರ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವಿಕೃತ ವಸ್ತುಗಳ ನಿಯಂತ್ರಣ ಕಾಯ್ದೆ (NDPS Act) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಜಪ್ತಿ ಮಾಡಲಾದ ಮಾದಕ ವಸ್ತುವಿನ ಮೂಲ, ಸಾಗಣೆ ಜಾಲ ಹಾಗೂ ಇದರ ಹಿಂದೆ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಗಳ ಕುರಿತು ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.



