ಹಾವೇರಿ: ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಸೋಮವಾರ ನಡೆದ ಹಿಂಸಾತ್ಮಕ ಘಟನೆ ಅತ್ಯಂತ ಖಂಡನೀಯ ಹಾಗೂ ಹೇಯ ಕೃತ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಕದಡುವ ಉದ್ದೇಶದಿಂದ ಯುವಕರ ಮೇಲೆ ಹಲ್ಲೆ ನಡೆದಿದೆ. ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕಠಿಣ ಶಿಸ್ತಿನ ಕ್ರಮ ಕೈಗೊಂಡು ಅವರನ್ನು ಜೈಲಿಗೆ ಕಳುಹಿಸಬೇಕು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಹಾಗೂ ಸರ್ಕಾರದಿಂದ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ಜಿಲ್ಲೆಯಲ್ಲಿ ದ್ವೇಷದ ವಾತಾವರಣ ನಿರ್ಮಾಣವಾಗುತ್ತಿರುವುದು ರಾಜಕೀಯ ಪ್ರೋತ್ಸಾಹದಿಂದ ನಡೆಯುತ್ತಿದೆ ಎಂಬುದು ಸ್ಪಷ್ಟವಾಗಿದ್ದು, ಪೊಲೀಸ್ ಇಲಾಖೆ ಪ್ರಚೋದನೆ ಮಾಡುವವರ ಪ್ರಭಾವಕ್ಕೆ ಒಳಗಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಿಸಲು ವಿಫಲರಾಗಿದ್ದಾರೆ ಎಂದು ಟೀಕಿಸಿರುವ ಬೊಮ್ಮಾಯಿ, ಈ ಘಟನೆ ಹಿಂದೆ ಅಕ್ರಮ ಚಟುವಟಿಕೆಗಳು ಹಾಗೂ ಜೂಜಾಟದ ಚಟುವಟಿಕೆಗಳ ಕುಮ್ಮಕ್ಕು ಕೂಡ ಇರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ತಕ್ಷಣವೇ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು, ಗಾಯಾಳುಗಳಿಗೆ ಚಿಕಿತ್ಸೆ ಹಾಗೂ ಪರಿಹಾರ ನೀಡಬೇಕು ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು ಎಂದು ಅವರು ಗೃಹ ಸಚಿವರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.



