ವಿಜಯಸಾಕ್ಷಿ ಸುದ್ದಿ, ಧಾರವಾಡ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ಕೇಂದ್ರ ಸಂವಹನ ಇಲಾಖೆ, ವಾರ್ತಾ ಮತ್ತು ಪ್ರಸಾರ ಸಚಿವಾಲಯ ಭಾರತ ಸರ್ಕಾರ, ತಾಲೂಕಾ ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಶ್ರೀಯಾ ನರ್ಸಿಂಗ್ ಕಾಲೇಜು ಇವರ ಸಹಯೋಗದೊಂದಿಗೆ, ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಅಂಗವಾಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜನಜಾಗೃತಿ ಜಾಥಾ ಕಾರ್ಯಕ್ರಮವನ್ನು ಶುಕ್ರವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಯಿತು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ, ಡೆಂಗ್ಯೂ ಜ್ವರ ನಿಯಂತ್ರಣದಲ್ಲಿ ಈಡೀಸ್ ಲಾರ್ವಾ ನಿರ್ಮೂಲನೆಯೇ ಅಸ್ತ್ರವಾಗಿದ್ದು, ಈಡೀಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ಪರಿಶೀಲಿಸಿ, ಸ್ವಚ್ಛಗೊಳಿಸಿ ಮುಚ್ಚಿಡುವುದರ ಮೂಲಕ ಈಡೀಸ್ ಉತ್ಪತ್ತಿಯನ್ನು ನಿಯಂತ್ರಿಸಬಹುದಾಗಿದೆ. ಡೆಂಗ್ಯೂ ಜ್ವರ ಹರಡುವ ಮುನ್ನ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಎಂದು ಸಲಹೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಎಸ್.ಎಮ್. ಹೊನಕೇರಿ ಮಾತನಾಡಿ, ಪ್ರಸ್ತುತ ಜಿಲ್ಲೆಯಲ್ಲಿನ ಡೆಂಗ್ಯೂ ಪ್ರಕರಣಗಳ ಸ್ಥಿತಿ-ಗತಿ ಕುರಿತು ವಿವರಿಸಿ, ಪ್ರತಿ ವರ್ಷ ಡೆಂಗ್ಯೂನಿAದ ಆಗುವ ಅಪಾಯಗಳ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಮೇ. 16ರಂದು ರಾಷ್ಟ್ರೀಯ ಡೆಂಗ್ಯೂ ದಿನ ಆಚರಿಸಲಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ಕಾರ್ಯಕ್ರಮ ಅಧಿಕಾರಿಗಳು, ಇತರರು ಇದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಆರ್. ಪಾತ್ರೋಟ ಸ್ವಾಗತಿಸಿ ವಂದಿಸಿದರು.