ಗದಗ: ಹರಿದ ರಾಷ್ಟ್ರಧ್ವಜವನ್ನು ಗ್ರಾಮ ಪಂಚಾಯಿತಿ ಕಚೇರಿ ಮೇಲೆ ಹಾರಿಸಿದ ಘಟನೆ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಮಜ್ಜೂರು ಗ್ರಾಮದಲ್ಲಿ ಬೆಳಕಿಗೆ ಬಂದಿದ್ದು, ಗ್ರಾಮಸ್ಥರು ಹಾಗೂ ರೈತ ಸಂಘದ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹರಿದ ರಾಷ್ಟ್ರಧ್ವಜ ಹಾರಿಸುವ ಮೂಲಕ ರಾಷ್ಟ್ರಗೌರವಕ್ಕೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿದ ಗ್ರಾಮಸ್ಥರು, ಈ ನಿರ್ಲಕ್ಷ್ಯಕ್ಕೆ ಕಾರಣರಾದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಘಟನೆ ತಿಳಿಯುತ್ತಿದ್ದಂತೆ ಗ್ರಾಮ ಪಂಚಾಯಿತಿ ಕಚೇರಿ ಎದುರು ಜಮಾಯಿಸಿದ ರೈತ ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಪಿಡಿಒ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು. ರಾಷ್ಟ್ರಧ್ವಜದಂತಹ ಗೌರವದ ಸಂಕೇತದ ವಿಚಾರದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಷ್ಟ್ರಧ್ವಜಕ್ಕೆ ಅವಮಾನವಾಗಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.



