ವಿಜಯಸಾಕ್ಷಿ ಸುದ್ದಿ, ಗದಗ: ಗೌರವಾನ್ವಿತ ಕರ್ನಾಟಕ ಉಚ್ಚ ನ್ಯಾಯಾಲಯ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ಆದೇಶದನ್ವಯ ಗದಗ ಜಿಲ್ಲೆಯಲ್ಲಿ ಡಿ. 13ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು, ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ.
ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು, ಮೊದಲಿನ ಬಾಂಧವ್ಯ ಉಳಿಸಿಕೊಳ್ಳಲು ತಮ್ಮ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಗದಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ನಾಗವೇಣಿ ತಿಳಿಸಿದ್ದಾರೆ.
ಗದಗ ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಸಿವಿಲ್ ದಾವೆಗಳು, ಸ್ವಾಧೀನ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಎಮ್.ಎಮ್.ಆರ್.ಡಿ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೇಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜೀಗಾಗಿ ಗುರುತಿಸಲಾಗಿದೆ.
ವಿಶೇಷವಾಗಿ ಕರ್ನಾಟಕ ರಾಜ್ಯ ಸರ್ಕಾರದ ಆದೇಶದನ್ವಯ ಪೊಲೀಸ್ ಇಲಾಖೆ ಸಂಚಾರಿ ಇ-ಚಲನ್ ನಲ್ಲಿ ದಾಖಲಾಗಿರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ. 50ರಷ್ಟು ರಿಯಾಯಿತಿ ಹಾಗೂ ಸಾರಿಗೆ ಇಲಾಖೆಯಲ್ಲಿ 1991-92ರಿಂದ 2019-20ರ ಅವಧಿಯಲ್ಲಿ ದಾಖಲಾಗಿ ಪಾವತಿಗೆ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ. 50ರಷ್ಟು ರಿಯಾಯಿತಿ ನೀಡಿ 21-11-2025ರಿಂದ 12-12-2025ರವರೆಗೆ ಕಾಲವಕಾಶವನ್ನು ನೀಡಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂಧಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನ ಒಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಸಲಾಗುವುದು. ಪ್ರಕರಣಗಳಿಗೆ ಸಂಬಂಧಪಟ್ಟ ವಕೀಲರು, ಕಕ್ಷಿದಾರರು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು, ಇಲಾಖೆಗಳವರು ಡಿ. 13ರಂದು ಜರುಗುವ ರಾಷ್ಟ್ರೀಯ ಲೋಕ ಅದಾಲತ್’ ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನ ಮೂಲಕ ಪರಿಹರಿಸಿಕೊಳ್ಳಬಹುದು.



