ವಿಜಯಸಾಕ್ಷಿ ಸುದ್ದಿ, ಗದಗ: ಸರ್ವೋಚ್ಛ ನ್ಯಾಯಾಲಯ ನವದೆಹಲಿ, ಕರ್ನಾಟಕ ಉಚ್ಛ ನ್ಯಾಯಾಲಯ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ಆದೇಶದನ್ವಯ ಗದಗ ಜಿಲ್ಲೆಯಲ್ಲಿ 13-09-2025ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು, ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಸುವರ್ಣಾವಕಾಶವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರ ಅಧ್ಯಕ್ಷರಾದ ಗಂಗಾಧರ ಸಿ.ಎಮ್ ತಿಳಿಸಿದರು.
ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ಜರುಗಿದ ಪತ್ರಿಕಾಗೋಷ್ಠಿಯನ್ನುದ್ದೇಶಿ ಅವರು ಮಾತನಾಡಿದರು.
ಗದಗ ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಪ್ರತಿಯೊಂದು ನ್ಯಾಯಾಲಯಕ್ಕೆ ಒಂದು ಬೆಂಚ್ ನಂತೆ ಒಟ್ಟು 15 ಬೆಂಚ್‌ಗಳನ್ನು ರಚಿಸಿದೆ. ಗದಗ ಜಿಲ್ಲೆಯಲ್ಲಿ ಒಟ್ಟು 20505 ವಿವಿಧ ಚಾಲ್ತಿ ಪ್ರಕರಣಗಳಿದ್ದು, ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ 2678 ಪ್ರಕರಣಗಳನ್ನು ಗುರುತಿಸಲಾಗಿದೆ. ಇದರಲ್ಲಿ ಮೀನುಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಮನೆ ಹಾಗೂ ನಿವೇಶನಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಸ್ವಾಧೀನ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಮರಳು ಕಳ್ಳ ಸಾಗಾಣಿಕೆ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜೀಗಾಗಿ ಗುರುತಿಸಲಾಗಿದೆ.
ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂಧಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನವೊಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು. ಪ್ರಕರಣಗಳಿಗೆ ಸಂಬಂಧಪಟ್ಟ ವಕೀಲರು, ಕಕ್ಷಿದಾರರು ಹಾಗೂ ವಿವಿದ ಇಲಾಖೆಗಳಿಗೆ ಸಂಬಂದಪಟ್ಟ ಅಧಿಕಾರಿಗಳು, ಇಲಾಖೆಗಳವರು ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನ ಮೂಲಕ ಪರಿಹರಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಮಾತನಾಡಿ, ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣದ ದಂಡದ ಮೊತ್ತದಲ್ಲಿ ಶೇ. 50ರಷ್ಟು ರಿಯಾಯತಿ ನೀಡಿ ಆದೇಶಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ದಿನಾಂಕ 1-7-2025ರಿಂದ 7-10-2025ರವರೆಗೆ ನಡೆಯಲಿರುವ ವಿಶೇಷ ಅಭಿಯಾನ-ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ 90 ದಿನಗಳ ಡ್ರೈವ್‌ನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ. ಅಭಿಯಾನದಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು, ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಮೋಟಾರು ಅಪಘಾತ ನ್ಯಾಯಾಧಿಕರಣದ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ವಾಣಿಜ್ಯ, ಸೇವಾ, ರಾಜೀಯಾಗಬಲ್ಲ ಅಪರಾಧಿಕ, ಗ್ರಾಹಕ ವ್ಯಾಜ್ಯ ಪ್ರಕರಣಗಳನ್ನು ಈ ಅಭಿಯಾನದಲ್ಲಿ ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಸುವರ್ಣಾವಕಾಶವಿದೆ ಎಂದರು.
ಧಾರವಾಡ ವಿಭಾಗದ ಅಧಿಕಾರ ವ್ಯಾಪ್ತಿಗೆ ಧಾರವಾಡ, ಉತ್ತರ ಕನ್ನಡ, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಗದಗ ಮತ್ತು ಹಾವೇರಿ ಜಿಲ್ಲೆಗಳು ಒಳಗೊಳ್ಳುತ್ತವೆ. 1987ರ ಕಾನೂನು ಸೇವೆಗಳ ಪ್ರಾಧಿಕಾರಿಗಳ ಕಾಯ್ದೆಯನ್ನು 2002ರಲ್ಲಿ ಕೇಂದ್ರ ಸರಕಾರವು ತಿದ್ದುಪಡಿ ಮಾಡಿದ ನಂತರ 2007ರಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಬೆಂಗಳೂರು, ಬೆಳಗಾವಿ, ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ಖಾಯಂ ಜನತಾ ನ್ಯಾಯಾಲಯವನ್ನು ಸ್ಥಾಪಿಸಿದೆ. ಸಾರ್ವಜನಿಕರು ಈ ಖಾಯಂ ಜನತಾ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸುವ ಮೂಲಕ ಶೀಘ್ರ ನ್ಯಾಯ ಪಡೆಯಬಹುದಾಗಿದೆ ಎಂದು ಸಿ.ಎಸ್. ಶಿವನಗೌಡ್ರ ತಿಳಿಸಿದರು.
ಕಳೆದ ಜುಲೈ-2025ರಂದು ಜರುಗಿದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 4552 ಚಾಲ್ತಿ ಪ್ರಕರಣಗಳನ್ನು ಹಾಗೂ 36460 ವ್ಯಾಜ್ಯಪೂರ್ವ ಪ್ರಕರಣಗಳನ್ನು ಸೇರಿ ಒಟ್ಟು 41012 ಪ್ರಕರಣಗಳ್ನು ರಾಜೀ ಮೂಲಕ ಇತ್ಯರ್ಥಪಡಿಸಿದೆ. ಪಕ್ಷಗಾರರು ನ್ಯಾಯಾಲಯಗಳಲ್ಲಿರುವ ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರ ಅಧ್ಯಕ್ಷರಾದ ಗಂಗಾಧರ ಸಿ.ಎಮ್ ಅವರು ಕರೆ ನೀಡಿದರು.