ಬೆಂಗಳೂರು:- ದೇಶವನ್ನು ಪೋಲಿಯೋ ಮುಕ್ತವಾಗಿಸುವ ಉದ್ದೇಶದಿಂದ ಕರ್ನಾಟಕದಾದ್ಯಂತ ಡಿಸೆಂಬರ್ 21ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ–2025ಕ್ಕೆ ಚಾಲನೆ ನೀಡಲಾಗಿದೆ.
ಈ ಅಭಿಯಾನದಡಿ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಿಕೊಳ್ಳುವಂತೆ ಕರ್ನಾಟಕ ಆರೋಗ್ಯ ಇಲಾಖೆ ಪೋಷಕರಿಗೆ ಮನವಿ ಮಾಡಿದೆ. ಪೋಲಿಯೋ ಒಂದು ಗಂಭೀರ ಹಾಗೂ ಮಾರಕ ರೋಗವಾಗಿದ್ದು, ಮಕ್ಕಳಲ್ಲಿ ಶಾಶ್ವತ ಅಂಗವೈಕಲ್ಯಕ್ಕೆ ಕಾರಣವಾಗಬಹುದು. ಇದಕ್ಕೆ ಚಿಕಿತ್ಸೆ ಇಲ್ಲದಿದ್ದರೂ ಲಸಿಕೆ ಮೂಲಕ ರೋಗವನ್ನು ಸಂಪೂರ್ಣವಾಗಿ ತಡೆಗಟ್ಟಲು ಸಾಧ್ಯವಿದೆ. “ಎರಡು ಹನಿ ಲಸಿಕೆ ಮಗುವಿನ ಭವಿಷ್ಯ” ಎಂಬ ಘೋಷವಾಕ್ಯದೊಂದಿಗೆ ಸರ್ಕಾರ ಅಭಿಯಾನವನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದಿದೆ.
ರಾಜ್ಯದಾದ್ಯಂತ ಸರ್ಕಾರಿ ಆಸ್ಪತ್ರೆಗಳು, ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಬಸ್ ನಿಲ್ದಾಣ, ರೈಲು ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಪೋಲಿಯೋ ಲಸಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮೊದಲ ದಿನ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದರೊಂದಿಗೆ, ನಂತರದ ಎರಡು ದಿನಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಮನೆಮನೆಗೆ ತೆರಳಿ ಲಸಿಕೆ ಪಡೆಯದ ಮಕ್ಕಳಿಗೆ ಲಸಿಕೆ ನೀಡಲಿದ್ದಾರೆ.
ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಡಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಐದು ನಿಗಮಗಳ ಮೂಲಕ ಒಟ್ಟು 11,34,988 ಮಕ್ಕಳಿಗೆ ಲಸಿಕೆ ನೀಡುವ ಗುರಿ ನಿಗದಿಪಡಿಸಲಾಗಿದೆ. ಈ ಕುರಿತು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಟ್ವೀಟ್ ಮಾಡಿದ್ದು, ಡಿಸೆಂಬರ್ 21ರಿಂದ 24ರವರೆಗೆ ಅಭಿಯಾನ ನಡೆಯಲಿದ್ದು, ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ಪೋಷಕರಿಗೆ ಮನವಿ ಮಾಡಿದೆ. ಜೀವದ ಎರಡು ಹನಿಗಳ ಮೂಲಕ ಪೋಲಿಯೋ ವಿರುದ್ಧ ವಿಜಯ ಸಾಧಿಸುವುದನ್ನು ಮುಂದುವರಿಸೋಣ ಎಂದು ಮನವಿ ಮಾಡಿದೆ.



