ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಚಂದನ ಸ್ಕೂಲ್ನಲ್ಲಿರುವ ಪ್ರೊ. ಸಿ.ಎನ್.ಆರ್. ರಾವ್ ವಿಜ್ಞಾನ ಕೇಂದ್ರದಲ್ಲಿ ಭಾರತ ರತ್ನ ಪ್ರೊ. ಸಿ.ಎನ್.ಆರ್. ರಾವ್ ಎಜ್ಯುಕೇಷನ್ ಫೌಂಡೇಶನ್ ಮತ್ತು ಸ್ಕೂಲ್ ಚಂದನ ಅವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ವಿಜ್ಞಾನ ವಿಸ್ತೃತ ಕಾರ್ಯಕ್ರಮ ಕಳೆದ 10 ವರ್ಷಗಳಿಂದ ಜರಗುತ್ತಿದ್ದು, ಇದೇ ಡಿ. 13ರಂದು 10ನೇ ವರ್ಷದ ವಿಜ್ಞಾನ ವಿಸ್ತೃತ ಕಾರ್ಯಕ್ರಮ ಉದ್ಘಾಟನೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಟಿ.ಈಶ್ವರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರೊ. ಸಿ.ಎನ್.ಆರ್. ರಾವ್ ಅವರು ಗ್ರಾಮೀಣ ಪ್ರದೇಶದಲ್ಲಿನ ಮಕ್ಕಳಿಗೆ ವಿಜ್ಞಾನ ಆಸಕ್ತಿ ಮೂಡಿಸುವ ಉದ್ದೇಶದಿಂದ ಈ ವಿಜ್ಞಾನ ವಿಸ್ತೃತ ಕಾರ್ಯಕ್ರಮವನ್ನು 10 ವರ್ಷಗಳಿಂದ ಲಕ್ಷ್ಮೀಶ್ವರದ ಚಂದನ ಶಾಲೆಯಲ್ಲಿ ನಡೆಸುತ್ತಿದ್ದು, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಖ್ಯಾತ ವಿಜ್ಞಾನಿಗಳು ಇದರಲ್ಲಿ ಪಾಲ್ಗೊಳ್ಳುತ್ತಾರೆ. ಇಂತಹ ವಿಶಿಷ್ಟ ಕಾರ್ಯಕ್ರಮದ ದಶಮಾನೋತ್ಸವ ಕಾರ್ಯಕ್ರಮಕ್ಕೆ ಸಿ.ಎಂ. ಸಿದ್ದರಾಮಯ್ಯ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸುವದರ ಜೊತೆಗೆ ಹಿರಿಯ ನಿವೃತ್ತ ಐಎಎಸ್ ಅಧಿಕಾರಿ ಬಿ.ಎಸ್. ಪಾಟೀಲ ಅವರಿಗೆ ಚಂದನ ಸಂಸ್ಥೆಯ ಪ್ರತಿಷ್ಠಿತ `ಚಂದನಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.
ಸಂಸ್ಥೆಯ ನಿರ್ದೇಶಕರಾಗಿದ್ದ ನಿವೃತ್ತ ಶಿಕ್ಷಕ ದಿ.ಎಚ್.ಸಿ. ರಟಗೇರಿ ಅವರ ಕಂಚಿನ ಪುತ್ಥಳಿಯನ್ನು ಅನಾವರಣಗೊಳಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಮಾಜಿ ಕೇಂದ್ರ ಸಚಿವ ಜೈರಾಮ್ ರಮೇಶ, ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ, ರೋಣ ಶಾಸಕ ಹಾಗೂ ಖನಿಜ ನಿಗಮದ ಅಧ್ಯಕ್ಷ ಜಿ.ಎಸ್. ಪಾಟೀಲ, ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ಮಾಜಿ ಶಾಸಕರುಗಳಾದ ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ ಆಗಮಿಸಲಿದ್ದು, ಸಂಸ್ಥೆಯ ಸಂಸ್ಥಾಪಕ ಟಿ.ಈಶ್ವರ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.



