ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಗಡಿ ಜಿಲ್ಲೆಗಳಾದ ಪೂಂಚ್ ಮತ್ತು ರಾಜೌರಿಯಲ್ಲಿ ಭೀಕರ ಪರಿಸ್ಥಿತಿ ನಿರ್ಮಾಣವಾಗಿದೆ.
ಭೂಕುಸಿತ ಹಾಗೂ ಹಠಾತ್ ಪ್ರವಾಹದಿಂದ ಇದುವರೆಗೆ 11 ಮಂದಿ ಮೃತಪಟ್ಟಿದ್ದು, 7 ಮಂದಿ ನಾಪತ್ತೆಯಾಗಿದ್ದಾರೆ.
ಧಾರಾಕಾರ ಮಳೆಯಿಂದ ನದಿಗಳು ಉಕ್ಕಿ ಹರಿದ ಪರಿಣಾಮ ಹಲವು ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ. ರಕ್ಷಣಾ ಸಿಬ್ಬಂದಿ ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಪೂಂಚ್ ಜಿಲ್ಲೆಯ ಸುರಂಕೋಟ್ ಪ್ರದೇಶದಲ್ಲಿ ಅತಿ ಹೆಚ್ಚು ಹಾನಿ ಸಂಭವಿಸಿದೆ. ಲೋವರ್ ಮುರ್ರಾ ಗ್ರಾಮದಲ್ಲಿ ಭೂಕುಸಿತದಿಂದ ಮನೆ ಕುಸಿದು ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಮೃತರಲ್ಲಿ ಎರಡು ವರ್ಷದ ಮಗು ಕೂಡ ಸೇರಿದೆ. ಅವಶೇಷಗಳಡಿ ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಸಾಂಗ್ಲಾ ಗ್ರಾಮದಲ್ಲಿ ಹಠಾತ್ ಪ್ರವಾಹಕ್ಕೆ ಮನೆ ಕೊಚ್ಚಿಹೋಗಿದ್ದು, ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದಾರೆ. ನೂನಬಂದಿ ಗ್ರಾಮದಲ್ಲಿ ಮನೆ ಕುಸಿದು 28 ವರ್ಷದ ಮಹಿಳೆ ಮೃತಪಟ್ಟಿದ್ದು, ಅವರ ಪತಿ ಹಾಗೂ ಮೂವರು ಮಕ್ಕಳನ್ನು ಗಾಯಗೊಂಡ ಸ್ಥಿತಿಯಲ್ಲಿ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇತ್ತ ರಾಜೌರಿ ಜಿಲ್ಲೆಯಲ್ಲೂ ಪ್ರವಾಹದ ಭೀತಿ ಎದುರಾಗಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿದ ಪರಿಣಾಮ ಹಲವು ಮನೆಗಳು ಹಾಗೂ ರಸ್ತೆಗಳು ಜಲಾವೃತಗೊಂಡಿವೆ. ಪ್ರವಾಹದ ನೀರಿನಲ್ಲಿ ವಾಹನಗಳು ಕೊಚ್ಚಿಹೋಗಿದ್ದು, ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಹಲವು ಕುಟುಂಬಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.
ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಮ್ಮ ದೆಹಲಿ ಪ್ರವಾಸವನ್ನು ಮೊಟಕುಗೊಳಿಸಿ ಜಮ್ಮುವಿಗೆ ವಾಪಸ್ ಆಗಿದ್ದಾರೆ. ರಕ್ಷಣಾ ಹಾಗೂ ಪರಿಹಾರ ಕಾರ್ಯಗಳ ಮೇಲ್ವಿಚಾರಣೆ ನಡೆಸುತ್ತಿರುವ ಅವರು, ಸಂತ್ರಸ್ತರಿಗೆ ಅಗತ್ಯ ನೆರವು ನೀಡುವುದಾಗಿ ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಅಧಿಕಾರಿಗಳಿಂದ ಪ್ರವಾಹ ಪರಿಸ್ಥಿತಿ ಕುರಿತು ಮಾಹಿತಿ ಪಡೆದು, ಕೇಂದ್ರ ಸರ್ಕಾರದಿಂದ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.
ಈ ನಡುವೆ ಭಾರತೀಯ ಹವಾಮಾನ ಇಲಾಖೆ (IMD) ಜುಲೈ 23ರವರೆಗೆ ಜಮ್ಮು-ಕಾಶ್ಮೀರದ ಹಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ ನೀಡಿದ್ದು, ಅಧಿಕಾರಿಗಳು ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಅಪಾಯದ ಪ್ರದೇಶಗಳಿಗೆ ತೆರಳದಂತೆ ಜನರಿಗೆ ಸೂಚನೆ ನೀಡಲಾಗಿದೆ.



