ಪುಣೆ: ಎನ್‌ಸಿಪಿ ನಾಯಕ ಹಾಗೂ ಹಿರಿಯ ರಾಜಕಾರಣಿ ಶರದ್ ಪವಾರ್ ಅವರು ಅನಾರೋಗ್ಯದ ಕಾರಣದಿಂದ ಇಂದು ಮಧ್ಯಾಹ್ನ ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಂಟಲು ಸಂಬಂಧಿತ ಸೋಂಕು, ಕೆಮ್ಮು ಹಾಗೂ ಜ್ವರದಿಂದ ಬಳಲುತ್ತಿದ್ದ ಶರದ್ ಪವಾರ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ.
ಬಾರಾಮತಿಯಲ್ಲಿರುವ ತಮ್ಮ ನಿವಾಸದಲ್ಲಿದ್ದಾಗಲೇ ಶರದ್ ಪವಾರ್ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಆದರೆ ಆರೋಗ್ಯದಲ್ಲಿ ಹೆಚ್ಚಿನ ಸುಧಾರಣೆ ಕಂಡುಬರದ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಅವರನ್ನು ಪುಣೆಗೆ ಸ್ಥಳಾಂತರಿಸಲಾಯಿತು.
ಪ್ರಸ್ತುತ ಶರದ್ ಪವಾರ್ ಆಸ್ಪತ್ರೆಯಲ್ಲಿ ವೈದ್ಯಕೀಯ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ತಂಡವು ಸಂಪೂರ್ಣ ಆರೋಗ್ಯ ಪರೀಕ್ಷೆ ನಡೆಸುತ್ತಿದ್ದು, ಅವರ ಪ್ರತಿಕ್ರಿಯೆ ಆಧರಿಸಿ ಮುಂದಿನ ಚಿಕಿತ್ಸಾ ಕ್ರಮ ನಿರ್ಧರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಆಸ್ಪತ್ರೆಯಲ್ಲಿ ಶರದ್ ಪವಾರ್ ಅವರ ಪುತ್ರಿ, ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಹಾಗೂ ಅಳಿಯ ಸದಾನಂದ ಸುಳೆ ಅವರು ಹಾಜರಿದ್ದು, ಕುಟುಂಬದವರು ನಿರಂತರವಾಗಿ ವೈದ್ಯರ ಸಂಪರ್ಕದಲ್ಲಿದ್ದಾರೆ.



