ಚೆನ್ನೈ: ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ NEET ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ 19 ವರ್ಷದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಅನುಕೀರ್ತನಾ (19) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಅನುಕೀರ್ತನಾ ಈಗಾಗಲೇ ಎರಡು ಬಾರಿ NEET ಪರೀಕ್ಷೆ ಬರೆದಿದ್ದಳು. ವೈದ್ಯಕೀಯ ಶಿಕ್ಷಣ ಪಡೆಯುವ ಕನಸಿನೊಂದಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಸಿದ್ಧತೆ ನಡೆಸುತ್ತಿದ್ದಳು. ಆದರೆ ಇತ್ತೀಚೆಗೆ NEET ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಮರುಪರೀಕ್ಷೆ ಕುರಿತ ಬೆಳವಣಿಗೆಗಳ ಬಳಿಕ ಆಕೆ ಮಾನಸಿಕವಾಗಿ ಕುಗ್ಗಿದ್ದಳು ಎನ್ನಲಾಗಿದೆ.
ಘಟನಾ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಾವಿನ ನಿಖರ ಕಾರಣದ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.
ವಿದ್ಯಾರ್ಥಿನಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. NEET ಪರೀಕ್ಷಾ ವ್ಯವಸ್ಥೆಯನ್ನು ರದ್ದುಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದು, ತಮಿಳುನಾಡಿಗೆ NEET ಪರೀಕ್ಷೆಯಿಂದ ವಿನಾಯಿತಿ ನೀಡಬೇಕು ಎಂಬ ಬೇಡಿಕೆ ಮತ್ತೆ ಮುನ್ನೆಲೆಗೆ ಬಂದಿದೆ.
ಈ ಬೆಳವಣಿಗೆಗೆ ಪ್ರತಿಕ್ರಿಯಿಸಿರುವ ಡಿಎಂಕೆ ನಾಯಕರು, ರಾಜ್ಯಕ್ಕೆ NEET ವಿನಾಯಿತಿ ನೀಡುವ ತಮ್ಮ ನಿಲುವನ್ನು ಪುನರುಚ್ಚರಿಸಿದ್ದು, ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಘೋಷಿಸಿದ್ದಾರೆ.
NEET ಜಾರಿಯಾದ ದಿನದಿಂದಲೂ ತಮಿಳುನಾಡು ಈ ಪರೀಕ್ಷಾ ವ್ಯವಸ್ಥೆಯನ್ನು ವಿರೋಧಿಸುತ್ತಾ ಬಂದಿದೆ. ದುಬಾರಿ ಖಾಸಗಿ ತರಬೇತಿ ಕೇಂದ್ರಗಳ ಸಹಾಯ ಪಡೆಯಲು ಸಾಧ್ಯವಾಗುವ ವಿದ್ಯಾರ್ಥಿಗಳಿಗೆ ಮಾತ್ರ ಇದು ಅನುಕೂಲಕರವಾಗಿದ್ದು, ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಡಿಎಂಕೆ ವಾದಿಸಿದೆ.



