HomeIndia Newsನೀಟ್ ಹೋರಾಟ ನಿರ್ಣಾಯಕ ಹಂತಕ್ಕೆ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಗ್ಗೆ ಇಂದು ಕೇಂದ್ರದ ಅಂತಿಮ ತೀರ್ಮಾನ?

ನೀಟ್ ಹೋರಾಟ ನಿರ್ಣಾಯಕ ಹಂತಕ್ಕೆ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಗ್ಗೆ ಇಂದು ಕೇಂದ್ರದ ಅಂತಿಮ ತೀರ್ಮಾನ?

For Dai;y Updates Join Our whatsapp Group

ನವದೆಹಲಿ: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳು ನಿರ್ಣಾಯಕ ಹಂತ ತಲುಪಿದ್ದು, ಕೇಂದ್ರ ಸರ್ಕಾರ ಇಂದು ಮಹತ್ವದ ನಿರ್ಧಾರ ಪ್ರಕಟಿಸುವ ನಿರೀಕ್ಷೆಯಿದೆ. ವಿಶೇಷವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಕುರಿತು ಸರ್ಕಾರ ಯಾವ ನಿಲುವು ತೆಗೆದುಕೊಳ್ಳಲಿದೆ ಎಂಬುದರತ್ತ ವಿದ್ಯಾರ್ಥಿಗಳು ಹಾಗೂ ದೇಶದ ಗಮನ ನೆಟ್ಟಿದೆ.

ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಆರಂಭವಾದ ವಿದ್ಯಾರ್ಥಿಗಳ ಪ್ರತಿಭಟನೆ ಕಳೆದ ಒಂದು ತಿಂಗಳಿನಿಂದ ಮುಂದುವರಿದಿದ್ದು, ಇದೀಗ ದೇಶದ ಹಲವು ರಾಜ್ಯಗಳಿಗೆ ವಿಸ್ತರಿಸಿದೆ. ನೀಟ್ ಪರೀಕ್ಷಾ ಅಕ್ರಮದ ವಿರುದ್ಧ ಪಾರದರ್ಶಕ ತನಿಖೆ ಮತ್ತು ಹೊಣೆಗಾರಿಕೆ ನಿಗದಿಪಡಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ.

ಮೂರು ಪ್ರಮುಖ ಬೇಡಿಕೆಗಳು

ಸಿಜೆಪಿ ಕೇಂದ್ರ ಸರ್ಕಾರದ ಮುಂದೆ ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ.

  • ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು.
  • ಆತ್ಮಹತ್ಯೆ ಮಾಡಿಕೊಂಡ ನೀಟ್ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕು.
  • ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ಗಳನ್ನು ಹಿಂಪಡೆಯಬೇಕು.

ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಹಾಗೂ ಜಿತೇಂದ್ರ ಸಿಂಗ್ ಅವರೊಂದಿಗೆ ನಡೆದ ಸಭೆಯಲ್ಲಿ, ವಿದ್ಯಾರ್ಥಿಗಳ ಮೇಲಿನ ಪ್ರಕರಣಗಳನ್ನು ಹಿಂಪಡೆಯುವುದು ಹಾಗೂ ಮೃತ ವಿದ್ಯಾರ್ಥಿಗಳ ಕುಟುಂಬಗಳಿಗೆ ₹1 ಕೋಟಿ ಪರಿಹಾರ ನೀಡುವ ಬೇಡಿಕೆಗಳಿಗೆ ಸರ್ಕಾರ ತಾತ್ವಿಕ ಒಪ್ಪಿಗೆ ಸೂಚಿಸಿದೆ ಎಂದು ಸಿಜೆಪಿ ತಿಳಿಸಿದೆ.

ಆದರೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಕುರಿತ ನಿರ್ಧಾರ ಇನ್ನೂ ಬಾಕಿಯಿದ್ದು, ಈ ಬಗ್ಗೆ ಸರ್ಕಾರಕ್ಕೆ 24 ಗಂಟೆಗಳ ಕಾಲಾವಕಾಶ ನೀಡಲಾಗಿತ್ತು. ಆ ಗಡುವು ಇಂದು ಅಂತ್ಯಗೊಳ್ಳಲಿದ್ದು, ಮತ್ತೊಂದು ಸುತ್ತಿನ ಮಾತುಕತೆಯಲ್ಲಿ ಸರ್ಕಾರ ತನ್ನ ಅಂತಿಮ ನಿಲುವು ಪ್ರಕಟಿಸುವ ಸಾಧ್ಯತೆ ಇದೆ.

ಇದರ ನಡುವೆಯೇ ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಕಠಿಣ ಕಾನೂನು ತರಲು ಮುಂದಾಗಿದೆ. ಹೊಸ ಪ್ರಸ್ತಾವದ ಪ್ರಕಾರ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ವಿಶೇಷ ಫಾಸ್ಟ್‌ಟ್ರ್ಯಾಕ್ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಸಿ ಮೂರು ತಿಂಗಳೊಳಗೆ ತೀರ್ಪು ನೀಡುವ ವ್ಯವಸ್ಥೆ ಜಾರಿಗೆ ಬರಲಿದೆ.

ಜೊತೆಗೆ, ತಪ್ಪಿತಸ್ಥರಿಗೆ ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹10 ಕೋಟಿ ವರೆಗೆ ದಂಡ ವಿಧಿಸುವ ಪ್ರಾವಧಾನವೂ ಹೊಸ ಕಾನೂನಿನಲ್ಲಿ ಇರಲಿದೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧದ ಮಸೂದೆಯನ್ನು ಶೀಘ್ರದಲ್ಲೇ ಸಂಸತ್ತಿನಲ್ಲಿ ಮಂಡಿಸುವ ಸಾಧ್ಯತೆ ಇದೆ.

ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ, “ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೆ ಪ್ರತಿಭಟನೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ” ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಸರ್ಕಾರದ ಇಂದಿನ ನಿರ್ಧಾರವು ವಿದ್ಯಾರ್ಥಿಗಳ ಹೋರಾಟದ ಮುಂದಿನ ದಿಕ್ಕನ್ನು ನಿರ್ಧರಿಸುವ ಸಾಧ್ಯತೆ ಇದೆ.

ಇನ್ನೊಂದೆಡೆ, ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯುವಜನರೊಂದಿಗೆ ಹೆಚ್ಚು ಸಂಪರ್ಕದಲ್ಲಿರಲು ಸಚಿವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ವಿಶೇಷವಾಗಿ ಇನ್‌ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು, ಯುವ ಸಮುದಾಯದ ಅಭಿಪ್ರಾಯಗಳನ್ನು ಆಲಿಸಿ ಅವರೊಂದಿಗೆ ನಿರಂತರ ಸಂಪರ್ಕ ಬೆಳೆಸುವಂತೆ ಸಚಿವರಿಗೆ ಸಲಹೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img