ಬೆಂಗಳೂರು:- ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದ ಮೂಲಕ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿ ಇದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಸಿಎಂ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ವಿವಿಧ ತಂಡಗಳಲ್ಲಿ ಇರುವ ಕನ್ನಡಿಗರ ಸಂಪರ್ಕದಲ್ಲಿದ್ದಾರೆ ಎಂದು ಅಧಿಕೃತವಾಗಿ ಹೇಳಿದ್ದಾರೆ.
ಇನ್ನೂ ರಾಜ್ಯ ಸರ್ಕಾರದ ಅಧಿಕಾರಿಗಳು ವಿದೇಶಾಂಗ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು, ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ. ಇನ್ನು ಮುಖ್ಯಮಂತ್ರಿಗಳ ಸೂಚನೆ ಬಳಿಕ ಮುಖ್ಯಕಾರ್ಯದರ್ಶಿ ನಿರಂತರವಾಗಿ ವಿದೇಶಾಂಗ ಇಲಾಖೆ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.
ನೇಪಾಳ ಧಗ ಧಗ:
ನೇಪಾಳದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಸಾಮಾಜಿಕ ಜಾಲತಾಣ ಬ್ಯಾನ್ ಮತ್ತು ಭ್ರಷ್ಟಾಚಾರದ ವಿರುದ್ಧ ಆರಂಭವಾದ ಕಿಚ್ಚು ಜ್ವಾಲಾಮುಖಿಯಾಗಿ ಇಡೀ ಪ್ರದೇಶವನ್ನೇ ಬೆಂಕಿಗಾಹುತಿ ಮಾಡಿದೆ. ಅಲ್ಲಿನ ಸದ್ಯದ ದೃಶ್ಯಗಳು ಕರಾಳತೆಯನ್ನು ಎತ್ತಿ ತೋರಿದೆ.