ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ತಮ್ಮ ಹೆಸರಿಗೆ ಮತ್ತೊಂದು ಐತಿಹಾಸಿಕ ದಾಖಲೆ ಸೇರಿಸಿಕೊಂಡಿದ್ದಾರೆ. ಸೌತ್ ಆಫ್ರಿಕಾ ವಿರುದ್ಧ ನಡೆದ ಯೂತ್ ಒಡಿಐ ಪಂದ್ಯದಲ್ಲಿ ವೈಭವ್, ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ರಿಷಭ್ ಪಂತ್ ಅವರ ಭರ್ಜರಿ ದಾಖಲೆಯನ್ನು ಮುರಿದು ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಸೌತ್ ಆಫ್ರಿಕಾ ವಿರುದ್ಧದ ಮೊದಲ ಯೂತ್ ಏಕದಿನ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅವರು, ಯೂತ್ ಒಡಿಐ ಕ್ರಿಕೆಟ್‌ನಲ್ಲಿ ಅತೀ ವೇಗವಾಗಿ ಅರ್ಧಶತಕ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಇದಕ್ಕೂ ಮುನ್ನ ಈ ದಾಖಲೆ 2016ರಲ್ಲಿ ನೇಪಾಳ ಅಂಡರ್-19 ತಂಡದ ವಿರುದ್ಧ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದ ರಿಷಭ್ ಪಂತ್ ಅವರ ಹೆಸರಿನಲ್ಲಿತ್ತು. ಇದೀಗ ಆ ದಾಖಲೆಯನ್ನು ಮುರಿದು ವೈಭವ್ ಸೂರ್ಯವಂಶಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ.
ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಕೇವಲ 24 ಎಸೆತಗಳಲ್ಲಿ 68 ರನ್‌ಗಳು ಗಳಿಸಿದರು. ಈ ವೇಳೆ ಅವರ ಬ್ಯಾಟ್‌ನಿಂದ 10 ಭರ್ಜರಿ ಸಿಕ್ಸರ್‌ಗಳು ಹಾಗೂ 1 ಫೋರ್ ಸಿಡಿಯಿತು. ಅವರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ಟೀಮ್ ಇಂಡಿಯಾ ಸೌತ್ ಆಫ್ರಿಕಾ ವಿರುದ್ಧದ ಮೊದಲ ಯೂತ್ ಏಕದಿನ ಪಂದ್ಯದಲ್ಲಿ ಮಹತ್ವದ ಗೆಲುವು ಸಾಧಿಸಿತು.
ಈ ಅದ್ಭುತ ಇನಿಂಗ್ಸ್ ಮೂಲಕ ವೈಭವ್ ಸೂರ್ಯವಂಶಿ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆದಿದ್ದು, ಭವಿಷ್ಯದ ಸ್ಟಾರ್ ಆಟಗಾರ ಎಂಬ ಭರವಸೆ ಮೂಡಿಸಿದ್ದಾರೆ.



