ವಿಜಯಸಾಕ್ಷಿ ಸುದ್ದಿ, ಧಾರವಾಡ: ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಸ್ವಂತ ಮನೆ ಎಂಬ ಕನಸನ್ನು ನನಸಾಗಿಸುವ ಮಹತ್ವದ ಯೋಜನೆಯನ್ನು ಜನವರಿ 24ರಂದು ಹುಬ್ಬಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಮನೆಗಳ ಲೋಕಾರ್ಪಣೆ ಕಾರ್ಯಕ್ರಮವು ಸರ್ಕಾರದ ಜನಪರ ಕಾರ್ಯಗಳ ಪ್ರತೀಕವಾಗಿದೆ ಎಂದು ಕಾರ್ಮಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್.ಲಾಡ್ ಹೇಳಿದರು.
ಅವರು ಸೋಮವಾರ ಜಿ.ಪಂ ಸಭಾಂಗಣದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಜ. 24ರಂದು ಹುಬ್ಬಳ್ಳಿಯಲ್ಲಿ ನಡೆಯಲಿರುವ ಮನೆಗಳ ಲೋಕಾರ್ಪಣೆ ಕಾರ್ಯಕ್ರಮದ ಸಿದ್ಧತೆಯ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಧಾರವಾಡ ಜಿಲ್ಲೆಯಲ್ಲಿ ಒಟ್ಟು 2,169 ಮನೆಗಳನ್ನು ಮಂಜೂರು ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ಮನೆಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲೆಯ 3 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ಹೇಳಿದರು.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಮಾತನಾಡಿ, ಕರ್ನಾಟಕದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಒಟ್ಟು 1,80,253 ಮನೆಗಳು ಮಂಜೂರಾಗಿವೆ. 86,651 ಮನೆಗಳ ನಿರ್ಮಾಣ ಕಾರ್ಯ ಈಗಾಗಲೇ ಪೂರ್ಣಗೊಂಡಿದೆ ಎಂದು ತಿಳಿಸಿದರು.



