ಹಾಸನ: ಜಿಲ್ಲೆಯ ಕೆಪಿಎಸ್ ಶಾಲೆಗಳನ್ನು ಮ್ಯಾಗ್ನೆಟ್ ಶಾಲೆಗಳಾಗಿ ಪರಿವರ್ತಿಸುವ ಮೂಲಕ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು,
ಹಳ್ಳಿಗಳಲ್ಲಿ ಕೆಲವೆಡೆ ನಾಲ್ಕು-ಐದು ಮಕ್ಕಳು ಮಾತ್ರ ಶಾಲೆಗೆ ಹಾಜರಾಗುತ್ತಿರುವ ಪರಿಸ್ಥಿತಿ ಇದೆ. ಇದರಿಂದ ಶಾಲೆಗಳು ನಾಮಕಾವಸ್ತೆಗೆ ನಡೆಯುತ್ತಿರುವಂತಾಗಿದೆ. ಮಕ್ಕಳಿಗೆ ಸಮರ್ಪಕ ಶಿಕ್ಷಣ ಸಿಗದ ಹಿನ್ನೆಲೆಯಲ್ಲಿ ಕೆಪಿಎಸ್ ಶಾಲೆಗಳನ್ನು ಬಲಪಡಿಸಿ ಮ್ಯಾಗ್ನೆಟ್ ಶಾಲೆಗಳಾಗಿ ರೂಪಾಂತರಿಸಿ ಉತ್ತಮ ಮೂಲಸೌಕರ್ಯ, ಅರ್ಹ ಶಿಕ್ಷಕರು ಹಾಗೂ ಗುಣಮಟ್ಟದ ಬೋಧನೆ ಒದಗಿಸುವುದು ಸರ್ಕಾರದ ಉದ್ದೇಶ ಎಂದು ಹೇಳಿದರು.
ಜಿಲ್ಲೆಯಲ್ಲಿ ಪ್ರಸ್ತುತ 15 ಕೆಪಿಎಸ್ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಎಲ್ಲಾ ಶಾಲೆಗಳಲ್ಲೂ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗಿದೆ ಎಂದು ಡಿಡಿಪಿಐ ರಂಗನಾಥ್ ಸಚಿವರಿಗೆ ಮಾಹಿತಿ ನೀಡಿದರು.
ಇದೇ ವೇಳೆ ಬಿಪಿಎಲ್ ಕಾರ್ಡ್ ಆದಾಯ ಮಿತಿಯನ್ನು 1.20 ಲಕ್ಷ ರೂಪಾಯಿಗೆ ಸೀಮಿತಗೊಳಿಸಿರುವ ಕುರಿತು ಶಾಸಕ ಕೆ.ಎಂ. ಶಿವಲಿಂಗೇಗೌಡ ಸಚಿವರ ಗಮನ ಸೆಳೆದರು. ಈ ನಿರ್ಧಾರದಿಂದ ಗ್ರಾಮೀಣ ಭಾಗದ ಅನೇಕ ಬಡವರ ಬಿಪಿಎಲ್ ಕಾರ್ಡ್‌ಗಳು ರದ್ದಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.



