ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶೀಘ್ರದಲ್ಲೇ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಸ್ಥಾಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಡಲಿದೆ ಎಂದು ಗೃಹ ಹಾಗೂ ಐಟಿ-ಬಿಟಿ, ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿರುವ ವೋಲ್ವರ್ಹ್ಯಾಂಪ್ಟನ್-ಬೆಂಗಳೂರು ಸಂಶೋಧನೆ ಮತ್ತು ಅನ್ವೇಷಣೆ ಕೇಂದ್ರ ಹಾಗೂ ಇಂಗ್ಲೆಂಡ್ನ ವೋಲ್ವರ್ಹ್ಯಾಂಪ್ಟನ್ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಮುನ್ನಡೆಸಲು ಕೃತಕ ಬುದ್ಧಿಮತ್ತೆಯ ಬಳಕೆ’ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರವು ವಿದ್ಯಾರ್ಥಿಗಳು ಹಾಗೂ ಯುವಜನರಿಗೆ ಭವಿಷ್ಯದ ಉದ್ಯೋಗ ಅವಕಾಶಗಳಿಗೆ ಅಗತ್ಯ ಕೌಶಲ್ಯಗಳನ್ನು ಒದಗಿಸುವ ಉದ್ದೇಶದಿಂದ ‘ಸ್ಥಳೀಯ ಕೌಶಲಾಭಿವೃದ್ಧಿ ಮತ್ತು ಜಾಗತಿಕ ಉದ್ಯೋಗ ನಿರ್ವಹಣೆ’ ಪರಿಕಲ್ಪನೆಯಡಿ ‘ನಿಪುಣ ಕರ್ನಾಟಕ’ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಗೆ ಮೂಲಸೌಕರ್ಯ ಹಾಗೂ ಮಾರ್ಗದರ್ಶನ ಒದಗಿಸಲು ₹300 ಕೋಟಿಗೂ ಹೆಚ್ಚಿನ ಅನುದಾನ ಮೀಸಲಿಡಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.
ಕೃತಕ ಬುದ್ಧಿಮತ್ತೆ ಆಧಾರಿತ ಪರ್ಸನಲ್ ಕಂಪ್ಯೂಟರ್ಗಳನ್ನು ಬಳಕೆಗೆ ತಂದ ವಿಶ್ವದ ಮೊದಲ ರಾಜ್ಯಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಇದರಿಂದ ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಸೃಷ್ಟಿಯಾಗಿವೆ ಎಂದು ಅವರು ಹೇಳಿದರು.
ಸ್ಟಾರ್ಟಪ್ ಕಂಪನಿಗಳಿಗೆ ನೀಡಲಾಗುತ್ತಿರುವ ಪ್ರೋತ್ಸಾಹಧನವನ್ನು ಮುಂದಿನ ವರ್ಷದಿಂದ ₹1 ಕೋಟಿಗೆ ಹೆಚ್ಚಿಸಲಾಗುವುದು ಎಂದು ಭರವಸೆ ನೀಡಿದ ಸಚಿವರು, ಕೃಷಿ, ಗ್ರಾಮೀಣಾಭಿವೃದ್ಧಿ, ಆರೋಗ್ಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ AI ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಮೂಲಕ ರಾಜ್ಯದ ಇ-ಆಡಳಿತ ವ್ಯವಸ್ಥೆಯನ್ನು ಐ-ಆಡಳಿತ (Intelligent Governance) ಹಂತಕ್ಕೆ ಕೊಂಡೊಯ್ಯುವ ಪ್ರಯತ್ನ ನಡೆಯುತ್ತಿದೆ ಎಂದರು.
2015ರಲ್ಲಿ ವಿಶ್ವದ 193 ದೇಶಗಳು ಒಪ್ಪಿಕೊಂಡಿರುವ 17 ಸುಸ್ಥಿರ ಅಭಿವೃದ್ಧಿ ಗುರಿಗಳನ್ನು 2030ರ ವೇಳೆಗೆ ಸಾಧಿಸುವ ಸವಾಲು ಎದುರಾಗಿದೆ. ಪರಿಸರ ಸ್ನೇಹಿ ಹಾಗೂ ಸುಸ್ಥಿರ ಅಭಿವೃದ್ಧಿಗಾಗಿ ಕೃತಕ ಬುದ್ಧಿಮತ್ತೆಯನ್ನು ಜವಾಬ್ದಾರಿಯುತವಾಗಿ ಮತ್ತು ವಿವೇಚನಾತ್ಮಕವಾಗಿ ಬಳಸಿಕೊಳ್ಳುವ ಅಗತ್ಯವಿದೆ ಎಂದು ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು.



