ನವದೆಹಲಿ: ತಮಿಳುನಾಡು ಬಿಜೆಪಿ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ ಎನ್ನುವ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿದೆ. ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿರುವುದಾಗಿ ವರದಿಯಾಗಿದೆ.
ಕಳೆದ ಕೆಲವು ತಿಂಗಳುಗಳಿಂದ ಪಕ್ಷದ ಉನ್ನತ ನಾಯಕತ್ವದೊಂದಿಗೆ ಅಣ್ಣಾಮಲೈ ಅವರ ಭಿನ್ನಾಭಿಪ್ರಾಯಗಳ ಬಗ್ಗೆ ಮಾತುಗಳು ಕೇಳಿಬರುತ್ತಿದ್ದವು. ವಿಶೇಷವಾಗಿ ಎಐಎಡಿಎಂಕೆ ಪಕ್ಷವನ್ನು ಮತ್ತೆ ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿಸಿಕೊಳ್ಳುವ ನಿರ್ಧಾರದ ಬಳಿಕ ಅಣ್ಣಾಮಲೈ ಅವರನ್ನು ಪಕ್ಷದ ಪ್ರಮುಖ ನಿರ್ಧಾರಗಳಿಂದ ದೂರವಿಡಲಾಗುತ್ತಿದೆ ಎಂಬ ಆರೋಪಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದವು.
ಈ ಹಿಂದೆ ತಮಿಳುನಾಡು ವಿಧಾನಸಭಾ ಚುನಾವಣೆಯ ಉಸ್ತುವಾರಿ ಸ್ಥಾನ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಹುದ್ದೆಗಳಿಂದಲೂ ಅವರು ಹಿಂದೆ ಸರಿದಿದ್ದರು. ಇದಾದ ಬಳಿಕ ಪಕ್ಷದ ಎರಡು ಪ್ರಮುಖ ರಾಜ್ಯ ಕಾರ್ಯಕಾರಿ ಸಭೆಗಳಿಗೆ ಗೈರಾಗಿರುವುದು ಹಲವು ಊಹಾಪೋಹಗಳಿಗೆ ಕಾರಣವಾಗಿತ್ತು.
ಇದೀಗ ಅಣ್ಣಾಮಲೈ ಅವರು ಬಿಜೆಪಿಯಿಂದ ಹೊರಬಂದು ‘ಮಕ್ಕಳ್ ಶಕ್ತಿ ಇಯಕ್ಕಂ’ ಹೆಸರಿನ ಹೊಸ ಜನಪರ ಚಳವಳಿಯನ್ನು ಆರಂಭಿಸುವ ಸಾಧ್ಯತೆ ಇದೆ ಎಂಬ ವರದಿಗಳು ಹರಿದಾಡುತ್ತಿವೆ. ಆದರೆ ಈ ಕುರಿತು ಅವರು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
ತ್ರಿಭಾಷಾ ನೀತಿ ಸೇರಿದಂತೆ ಕೆಲವು ವಿಷಯಗಳಲ್ಲಿ ಕೇಂದ್ರ ನಾಯಕತ್ವದ ನಿಲುವಿಗೆ ವಿರುದ್ಧವಾಗಿ ಅಣ್ಣಾಮಲೈ ಸಾರ್ವಜನಿಕವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದೂ ಅವರ ಮತ್ತು ಪಕ್ಷದ ನಡುವಿನ ಅಂತರ ಹೆಚ್ಚಲು ಕಾರಣವಾಗಿದೆ ಎನ್ನಲಾಗಿದೆ.
ಇದರ ನಡುವೆ ಕೊಯಮತ್ತೂರಿನಲ್ಲಿ ಅಣ್ಣಾಮಲೈ ಭಾವಚಿತ್ರವಿರುವ ಪೋಸ್ಟರ್‌ಗಳು ಕಾಣಿಸಿಕೊಂಡಿದ್ದು, “ಭಯವಿಲ್ಲದ ಮನಸ್ಸಿಗೆ ಮಿತಿಗಳಿಲ್ಲ” ಎಂಬ ಸಂದೇಶ ರಾಜಕೀಯ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ. 2021ರಿಂದ 2025ರವರೆಗೆ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಅಣ್ಣಾಮಲೈ ರಾಜ್ಯದಲ್ಲಿ ಪಕ್ಷದ ವಿಸ್ತರಣೆಗೆ ಪ್ರಮುಖ ಮುಖವಾಗಿದ್ದರು.



