For Dai;y Updates Join Our whatsapp Group
ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರುಎಣಿಕೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡರಿಗೆ ಸುಪ್ರೀಂ ಕೋರ್ಟ್ ಮತ್ತೆ ಮಧ್ಯಂತರ ರಿಲೀಫ್ ನೀಡಿದೆ. ಪ್ರಕರಣದ ವಿಚಾರಣೆಯನ್ನು ಜುಲೈ 23ಕ್ಕೆ ಮುಂದೂಡಿರುವ ನ್ಯಾಯಾಲಯ, ಅದುವರೆಗೂ ಯಥಾಸ್ಥಿತಿ ಮುಂದುವರಿಯಬೇಕು ಎಂದು ಸ್ಪಷ್ಟ ಸೂಚನೆ ನೀಡಿದೆ.
ಅಂಚೆ ಮತಗಳ ಮರುಎಣಿಕೆ ವೇಳೆ ಮತಪತ್ರ ತಿರುಚಾಟ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಟಿ.ಡಿ.ರಾಜೇಗೌಡ ಅವರು ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಮೇ 11ರಂದು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಮರು ಮತ ಎಣಿಕೆ ಪ್ರಕ್ರಿಯೆ ಹಾಗೂ ಅದರ ಫಲಿತಾಂಶಕ್ಕೆ ತಾತ್ಕಾಲಿಕ ತಡೆ ನೀಡಿತ್ತು. ಜೊತೆಗೆ ಸಂಬಂಧಿತ ಎಲ್ಲಾ ದಾಖಲೆಗಳನ್ನು ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಲಾಗಿತ್ತು.
ಗುರುವಾರ ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ವಿನೋದ್ ಚಂದ್ರನ್ ಅವರ ಪೀಠದಲ್ಲಿ ಪ್ರಕರಣ ಮರು ವಿಚಾರಣೆಗೆ ಬಂದಿದ್ದು, ಸುದೀರ್ಘ ಚರ್ಚೆಯ ಬಳಿಕ ಮುಂದಿನ ವಿಚಾರಣೆಯನ್ನು ಜುಲೈ 23ಕ್ಕೆ ನಿಗದಿಪಡಿಸಲಾಗಿದೆ.
ಇದೀಗ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ವಿಸ್ತರಣೆ ಮಾಡಿದ ಹಿನ್ನೆಲೆ, ಟಿ.ಡಿ.ರಾಜೇಗೌಡರ ಶಾಸಕ ಸ್ಥಾನ ಮುಂದುವರಿಯುವುದು ಖಚಿತವಾಗಿದೆ.