ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಸೊಂಡೆಕೊಪ್ಪದಲ್ಲಿರುವ ವಿದೇಶಿ ಪ್ರಜೆಗಳ ನಿರ್ಬಂಧಿತ ಕೇಂದ್ರದಲ್ಲಿ ನೈಜೀರಿಯಾ ಮೂಲದ ವ್ಯಕ್ತಿಯೊಬ್ಬ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ.
ಕೆವಿನ್ ಜೇಮ್ಸ್ ಎಂಬಾತ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದ್ದು, ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಡುಗಡೆ ಮಾಡುವಂತೆ ಒತ್ತಾಯಿಸಿ ಹಲ್ಲೆ ಆರೋಪ:
ವೀಸಾ ಅವಧಿ ಮುಗಿದಿರುವ ವಿದೇಶಿ ಪ್ರಜೆಗಳು ಹಾಗೂ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಕೆಲವರನ್ನು ಸೊಂಡೆಕೊಪ್ಪದ ನಿರ್ಬಂಧಿತ ಕೇಂದ್ರದಲ್ಲಿ ಇರಿಸಲಾಗುತ್ತದೆ.
ನೈಜೀರಿಯಾ ಮೂಲದ ಕೆವಿನ್ ಜೇಮ್ಸ್ ವಿರುದ್ಧ ಈ ಹಿಂದೆ ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ (NDPS) ಹಾಗೂ ಕೊಲೆಯತ್ನ ಸೇರಿದಂತೆ ಮೂರರಿಂದ ನಾಲ್ಕು ಗಂಭೀರ ಪ್ರಕರಣಗಳು ದಾಖಲಾಗಿದ್ದವು ಎಂದು ವರದಿಯಾಗಿದೆ. ಈ ಪ್ರಕರಣಗಳಲ್ಲಿ ಜಾಮೀನು ಪಡೆದಿದ್ದರೂ, ವೀಸಾ ಅವಧಿ ಮುಗಿದಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯದ ಸೂಚನೆಯಂತೆ ಆತನನ್ನು ನಿರ್ಬಂಧಿತ ಕೇಂದ್ರದಲ್ಲಿ ಇರಿಸಲಾಗಿತ್ತು ಎನ್ನಲಾಗಿದೆ.
ಎರಡು ದಿನಗಳ ಹಿಂದೆ ಜಾಮೀನು ದೊರೆತಿರುವುದಾಗಿ ಹೇಳಿಕೊಂಡು ತನ್ನನ್ನು ಬಿಡುಗಡೆ ಮಾಡುವಂತೆ ಕೆವಿನ್ ಜೇಮ್ಸ್ ಒತ್ತಾಯಿಸಿದ್ದಾನೆ. ಈ ವೇಳೆ ಆಕ್ರೋಶಗೊಂಡು ಕರ್ತವ್ಯದಲ್ಲಿದ್ದ ಸಹಾಯಕ ಪೊಲೀಸ್ ಉಪನಿರೀಕ್ಷಕ (ಎಎಸ್ಐ), ಪೊಲೀಸ್ ಕಾನ್ಸ್ಟೆಬಲ್ (ಪಿಸಿ) ಸೇರಿದಂತೆ ಇತರ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು:
ಘಟನೆಗೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಹಲ್ಲೆಯ ನಿಖರ ಸ್ವರೂಪ ಹಾಗೂ ಘಟನೆಯ ಇತರ ವಿವರಗಳ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

