ವಿಜಯಸಾಕ್ಷಿ ಸುದ್ದಿ, ಗದಗ: ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಜನವರಿ 21ರಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕುರಿತು ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಲೂಕು ಮಟ್ಟದಲ್ಲಿಯೂ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ವ್ಯವಸ್ಥಿತವಾಗಿ ಆಚರಿಸಲು ಕ್ರಮ ವಹಿಸಬೇಕು. ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು. ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಾಗದಂತೆ ಅರ್ಥಪೂರ್ಣ ಆಚರಣೆಗೆ ಕ್ರಮ ಕೈಗೊಳ್ಳಬೇಕು. ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಮಾಜದ ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ಸ್ವಾಗತಿಸಿದರು. ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಎಸ್. ಬುರುಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಎಂ.ಎಂ ತುಂಬರಮಟ್ಟಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ ಸೇರಿದಂತೆ ಸಮಾಜದ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.



