ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ವೈಪರೀತ್ಯದಿಂದ ಕೆಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ಬರದ ಆತಂಕ ಎದುರಾಗಿದೆ.
ಈ ಹಿನ್ನೆಲೆಯಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಮುಂದಾಗಿದ್ದಾರೆ.
ಜುಲೈ 13ರಿಂದ 15ರವರೆಗೆ ನಿಖಿಲ್ ಕುಮಾರಸ್ವಾಮಿ ಅವರು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಲಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ನಿಖಿಲ್ ಕುಮಾರಸ್ವಾಮಿ, ಕೆಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಭೂಮಿಯನ್ನೇ ನಂಬಿಕೊಂಡಿರುವ ಅನ್ನದಾತರ ನೋವು ನಮ್ಮನ್ನು ಕಾಡುತ್ತಿದೆ. ನಮ್ಮ ತಂಡಗಳು ನೆರೆ ಹಾಗೂ ಬರ ಪೀಡಿತ ಪ್ರದೇಶಗಳಿಗೆ ನೇರವಾಗಿ ಭೇಟಿ ನೀಡಿ, ಸಂತ್ರಸ್ತ ರೈತ ಕುಟುಂಬಗಳನ್ನು ಸಂಪರ್ಕಿಸಿ ಅವರ ಸಂಕಷ್ಟಗಳನ್ನು ಆಲಿಸಲಿವೆ. ರೈತರಿಗೆ ಅರ್ಹ ಪರಿಹಾರ ಸಿಗುವವರೆಗೂ ನಾವು ಹೋರಾಡಲಿದ್ದೇವೆ ಎಂದು ನಿಖಿಲ್ ತಿಳಿಸಿದ್ದಾರೆ.
ಇನ್ನೂ ನಿಖಿಲ್ ಕುಮಾರಸ್ವಾಮಿ ಅವರು ಜುಲೈ 14ರಂದು ವಿಜಯಪುರ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರೈತರೊಂದಿಗೆ ಚರ್ಚೆ ನಡೆಸಲಿದ್ದಾರೆ. ಬಳಿಕ ವಿಜಯಪುರದಲ್ಲೇ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಜುಲೈ 15ರಂದು ಬಾಗಲಕೋಟೆ ಜಿಲ್ಲೆಯ ಬಾದಾಮಿಗೆ ಭೇಟಿ ನೀಡಿ ಅಲ್ಲಿನ ರೈತರ ಸಮಸ್ಯೆಗಳನ್ನು ಆಲಿಸಲಿದ್ದಾರೆ.



