ಕೇರಳ: ವಯನಾಡ್ ಮತ್ತು ಕೋಯಿಕ್ಕೋಡ್ ಜಿಲ್ಲೆಗಳಲ್ಲಿ ಶಿಗೆಲ್ಲಾ ವೈರಸ್ ಸೋಂಕಿನ ಆತಂಕದ ನಡುವೆಯೇ ಕೇರಳದಲ್ಲಿ ಮತ್ತೆ ನಿಫಾ ವೈರಸ್ ಕಾಣಿಸಿಕೊಂಡಿದ್ದು, ಆರೋಗ್ಯ ಇಲಾಖೆಯನ್ನು ಎಚ್ಚರ ಸ್ಥಿತಿಗೆ ತಳ್ಳಿದೆ. ಕೋಯಿಕ್ಕೋಡ್‌ನ 43 ವರ್ಷದ ವ್ಯಕ್ತಿಯೊಬ್ಬರಲ್ಲಿ ನಿಫಾ ವೈರಸ್ ಸೋಂಕು ಪತ್ತೆಯಾಗಿದ್ದು, ರಾಜ್ಯ ಸರ್ಕಾರ ಹೈ ಅಲರ್ಟ್ ಘೋಷಿಸಿದೆ.
ಸೋಂಕಿತ ವ್ಯಕ್ತಿಯಲ್ಲಿ ಕಂಡುಬಂದ ಲಕ್ಷಣಗಳ ಆಧಾರದ ಮೇಲೆ ಕೋಯಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಪ್ರಯೋಗಾಲಯದಲ್ಲಿ ನಡೆಸಿದ ಪ್ರಾಥಮಿಕ ಪರೀಕ್ಷೆಯಲ್ಲಿ ನಿಫಾ ಸೋಂಕು ಇರುವುದು ದೃಢಪಟ್ಟಿದೆ. ಅವರನ್ನು ವಿಶೇಷ ಐಸೊಲೇಷನ್ ವಾರ್ಡ್‌ನಲ್ಲಿ ದಾಖಲಿಸಲಾಗಿದ್ದು, ವೆಂಟಿಲೇಟರ್ ಸಹಾಯದೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ರೋಗಿಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ತೀವ್ರ ಜ್ವರ ಹಾಗೂ ಮಿದುಳು ಜ್ವರ (ಎನ್ಸೆಫಲೈಟಿಸ್) ಲಕ್ಷಣಗಳ ಹಿನ್ನೆಲೆಯಲ್ಲಿ ಒಂದು ವಾರದ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆದಿದ್ದರೂ ಆರೋಗ್ಯದಲ್ಲಿ ಸುಧಾರಣೆ ಕಾಣಿಸದ ಕಾರಣ ನಿಫಾ ಸೋಂಕಿನ ಶಂಕೆ ವ್ಯಕ್ತವಾಗಿತ್ತು. ಬಳಿಕ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ ಮಧ್ಯರಾತ್ರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಸೋಂಕಿನ ಅಂತಿಮ ದೃಢೀಕರಣಕ್ಕಾಗಿ ರೋಗಿಯ ಗಂಟಲು ದ್ರವದ ಮಾದರಿಗಳನ್ನು ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ (ಎನ್‌ಐವಿ)ಗೆ ಕಳುಹಿಸಲಾಗಿದ್ದು, ವರದಿ ಶೀಘ್ರದಲ್ಲೇ ಲಭ್ಯವಾಗುವ ನಿರೀಕ್ಷೆಯಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಸೋಂಕಿತ ವ್ಯಕ್ತಿ ಹಳೆಯ ಕಟ್ಟಡಗಳ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಫೆರೋಕ್ ಪ್ರದೇಶದಲ್ಲಿನ ಹಳೆಯ ಕಟ್ಟಡವೊಂದನ್ನು ಸ್ವಚ್ಛಗೊಳಿಸುವ ವೇಳೆ ಬಾವಲಿಗಳ ಸಂಪರ್ಕದಿಂದ ವೈರಸ್ ತಗುಲಿರಬಹುದೆಂದು ಶಂಕಿಸಲಾಗಿದೆ.
ಇದೇ ವೇಳೆ, ತೀವ್ರ ಜ್ವರ ಮತ್ತು ಪ್ರಜ್ಞೆ ತಪ್ಪುವ ಲಕ್ಷಣಗಳು ಕಾಣಿಸಿಕೊಂಡಾಗ ಮದ್ಯವ್ಯಸನಿಯಾಗಿದ್ದ ವ್ಯಕ್ತಿಗೆ ಮದ್ಯ ಸಿಗದ ಕಾರಣ ಈ ಸ್ಥಿತಿ ಉಂಟಾಗಿದೆ ಎಂದು ಕುಟುಂಬಸ್ಥರು ಭಾವಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ವ್ಯಸನಮುಕ್ತಿ ಕೇಂದ್ರಕ್ಕೂ ದಾಖಲಿಸಲಾಗಿತ್ತು ಎನ್ನಲಾಗಿದೆ.
ರೋಗಿಯು ಹಲವು ಆಸ್ಪತ್ರೆಗಳು ಹಾಗೂ ವ್ಯಸನಮುಕ್ತಿ ಕೇಂದ್ರಗಳಿಗೆ ಭೇಟಿ ನೀಡಿದ್ದರಿಂದ ಅನೇಕ ಜನರೊಂದಿಗೆ ಸಂಪರ್ಕಕ್ಕೆ ಬಂದಿರುವ ಸಾಧ್ಯತೆ ಇದೆ. ಹೀಗಾಗಿ ಆರೋಗ್ಯ ಇಲಾಖೆ ಅವರ ಪ್ರಾಥಮಿಕ ಸಂಪರ್ಕಿತರ ಪಟ್ಟಿಯನ್ನು ಸಿದ್ಧಪಡಿಸುತ್ತಿದ್ದು, ಸಂಬಂಧಿಕರು ಹಾಗೂ ನಿಕಟ ಸಂಪರ್ಕದಲ್ಲಿದ್ದವರಿಗೆ ಕ್ವಾರಂಟೈನ್‌ಗೆ ಒಳಗಾಗುವಂತೆ ಸೂಚನೆ ನೀಡಿದೆ.
ನಿಫಾ ವೈರಸ್ ಮರುಕಳಿಸಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರು ವೈದ್ಯಕೀಯ ತಜ್ಞರೊಂದಿಗೆ ತುರ್ತು ಸಭೆ ನಡೆಸಿದ್ದು, ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮಗಳ ಕುರಿತು ಚರ್ಚಿಸಿದ್ದಾರೆ. ವೈದ್ಯಕೀಯ ಕಾಲೇಜು ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದ್ದು, ಸಾರ್ವಜನಿಕರ ಪ್ರವೇಶಕ್ಕೂ ನಿರ್ಬಂಧ ಹೇರಲಾಗಿದೆ.



