ಬೆಂಗಳೂರು: ಬಳ್ಳಾರಿ ಘಟನೆಯ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಈ ಪ್ರಕರಣವನ್ನು ತನಿಖೆ ಮಾಡುವ ಸಂಪೂರ್ಣ ಸಾಮರ್ಥ್ಯ ರಾಜ್ಯ ಪೊಲೀಸರಿಗೆ ಇದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಪೊಲೀಸರಿಂದ ತನಿಖೆ ನಡೆಸಲು ಸಾಧ್ಯವಿಲ್ಲ ಎಂಬ ಪರಿಸ್ಥಿತಿ ಬಂದರೆ ಮಾತ್ರ ಸಿಬಿಐಗೆ ವಹಿಸುವ ಬಗ್ಗೆ ಚರ್ಚಿಸಬಹುದು. ಆದರೆ ಈಗಾಗಲೇ ಯಾವುದೇ ಪ್ರಕರಣಗಳನ್ನು ಸಿಬಿಐಗೆ ನೀಡುವುದಿಲ್ಲ ಎಂಬ ತೀರ್ಮಾನವನ್ನು ಕ್ಯಾಬಿನೆಟ್‌ನಲ್ಲಿ ತೆಗೆದುಕೊಳ್ಳಲಾಗಿದೆ. ಹೀಗಾಗಿ ಸಿಬಿಐಗೆ ಒಪ್ಪಿಸುವ ಅಗತ್ಯತೆ ಇಲ್ಲ ಎಂದರು.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಕುಮಾರಸ್ವಾಮಿ ಅವರು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು ಮತ್ತು ಪ್ರಸ್ತುತ ಕೇಂದ್ರದಲ್ಲಿ ಬೃಹತ್ ಕೈಗಾರಿಕೆ ಸಚಿವರಾಗಿದ್ದಾರೆ. ನನ್ನ ಬಗ್ಗೆ ವೈಯಕ್ತಿಕವಾಗಿ ಹೇಳಿಕೆ ನೀಡಿದ್ದಾರೆ. ನಾನು ಕೂಡ ಅವರ ಬಗ್ಗೆ ಮಾತನಾಡಬಹುದು. ಆದರೆ ಅವರು ಜವಾಬ್ದಾರಿಯುತವಾಗಿ ಹೇಳಿಕೆ ನೀಡಿದ್ದಾರೆ ಎಂದು ಭಾವಿಸುತ್ತೇನೆ. ಅದನ್ನು ನಾನು ಸ್ವೀಕರಿಸುತ್ತೇನೆ ಎಂದು ಹೇಳಿದರು.



