ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಅವರ ಹೆಸರು ಪ್ರಸ್ತಾಪವಾಗಿರುವ ಕುರಿತು ಗೃಹಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಕೇವಲ ಹೆಸರು ಪ್ರಸ್ತಾಪವಾದ ಮಾತ್ರಕ್ಕೆ ಯಾರನ್ನೂ ಅಪರಾಧಿ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣದ ಕುರಿತು ನ್ಯಾಯಾಲಯ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥರಿಗೆ ಪ್ರಶ್ನೆ ಕೇಳಿದ್ದು, ಅದಕ್ಕೆ ಅವರೇ ಉತ್ತರ ನೀಡಬೇಕು ಎಂದು ಹೇಳಿದರು. ಈ ವಿಚಾರವನ್ನು ಮಾಧ್ಯಮಗಳ ಮೂಲಕ ಚರ್ಚೆ ಮಾಡುವುದು ಸೂಕ್ತವಲ್ಲ ಎಂದು ತಿಳಿಸಿದರು.
ಇದೇ ವೇಳೆ, ಮೈಕ್ರೋ ಫೈನಾನ್ಸ್ ಕಾಯ್ದೆಯನ್ನು ಧರ್ಮಸ್ಥಳ ಸಂಘ ಪಾಲಿಸುತ್ತಿಲ್ಲ ಎಂಬ ಆರೋಪದ ಕುರಿತೂ ಪ್ರತಿಕ್ರಿಯಿಸಿದ ಅವರು, ಹೊಸ ಕಾಯ್ದೆ ಇಡೀ ರಾಜ್ಯಕ್ಕೆ ಅನ್ವಯವಾಗುತ್ತದೆ ಹೊರತು ಯಾವುದೇ ಒಂದು ಸಂಸ್ಥೆಗೆ ಮಾತ್ರ ಸೀಮಿತವಾಗಿಲ್ಲ ಎಂದು ಸ್ಪಷ್ಟಪಡಿಸಿದರು.
“ಹೊಸ ಕಾಯ್ದೆ ಜಾರಿಯಾದ ಬಳಿಕ ಯಾರು ಉಲ್ಲಂಘನೆ ಮಾಡಿದ್ದಾರೆ ಎಂಬ ಬಗ್ಗೆ ನನಗೆ ಸದ್ಯ ಮಾಹಿತಿ ಇಲ್ಲ. ಒಂದು ವಾರ ಅಥವಾ ಹತ್ತು ದಿನಗಳಲ್ಲಿ ಸಭೆ ನಡೆಸಿ ಈ ಕುರಿತು ಪರಿಶೀಲನೆ ಮಾಡಲಾಗುವುದು. ಧರ್ಮಸ್ಥಳ ಸಂಘ ಸೇರಿದಂತೆ ಎಲ್ಲ ಸಂಸ್ಥೆಗಳೂ ಕಾನೂನಿನ ನಿಯಮಗಳನ್ನು ಪಾಲಿಸಬೇಕು. ಈ ಸಂಬಂಧ ಯಾವುದೇ ದೂರು ಬಂದಿದ್ದರೆ ಅದರ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.
ಇನ್ನೊಂದೆಡೆ, ಬೆಂಗಳೂರಿನ ಕಾಡುಗೋಡಿಯಲ್ಲಿ ನಡೆದ ಮಗು ಹತ್ಯೆ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಗೃಹಸಚಿವರು, ತನಿಖೆಯಲ್ಲಿ ಗಂಭೀರ ಲೋಪಗಳು ನಡೆದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
“ಈ ಪ್ರಕರಣದ ಕುರಿತು ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇನೆ. ಏಪ್ರಿಲ್ 4ರಂದು ಮರಣೋತ್ತರ ಪರೀಕ್ಷಾ ವರದಿ ಬಂದ ಕೂಡಲೇ ಅನುಮಾನಾಸ್ಪದ ಸಾವು ಎಂದು ಪರಿಗಣಿಸಿ ತನಿಖೆ ಆರಂಭಿಸಬೇಕಿತ್ತು. ಆದರೆ ಪ್ರಕರಣವನ್ನು ಕೇವಲ ಯುಡಿಆರ್ (ಅಸ್ವಾಭಾವಿಕ ಸಾವು ವರದಿ) ಆಗಿ ದಾಖಲಿಸಿ ಎಸ್ಐ ಮಟ್ಟದಲ್ಲೇ ಉಳಿಸಿಕೊಳ್ಳಲಾಗಿತ್ತು. ಇದು ಕಾನೂನುಬಾಹಿರ ಮತ್ತು ಗಂಭೀರ ಲೋಪವಾಗಿದೆ” ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ಸಂಬಂಧಿತ ಪೊಲೀಸ್ ಇನ್ಸ್‌ಪೆಕ್ಟರ್, ಸಬ್‌ಇನ್ಸ್‌ಪೆಕ್ಟರ್ ಹಾಗೂ ರೈಟರ್ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದರು. ಜೊತೆಗೆ ಪ್ರಕರಣದ ಪ್ರಮುಖ ಆರೋಪಿಗಳಾದ ಎ1 ಮತ್ತು ಎ2ರನ್ನು ಈಗಾಗಲೇ ಬಂಧಿಸಲಾಗಿದೆ ಎಂದರು.



