ವಿಜಯಸಾಕ್ಷಿ ಸುದ್ದಿ, ಹಾವೇರಿ : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಎಂ. ಅವರು ಗುರುವಾರ ಹಾವೇರಿ ವಿಭಾಗ ವ್ಯಾಪ್ತಿಯ ಶಿಗ್ಗಾಂವ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಬಸ್ ಘಟಕ ಹಾಗೂ ಚಾಲಕರ ತರಬೇತಿ ಕೇಂದ್ರದ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪ್ರಗತಿಯನ್ನು ಪರಿಶೀಲನೆ ಮಾಡಿದರು. ಕಾಮಗಾರಿ ಕಾರ್ಯವನ್ನು ಗುಣಮಟ್ಟದೊಂದಿಗೆ ತ್ವರಿತಗತಿಯಲ್ಲಿ ನಿರ್ವಹಿಸಲು ಸಂಸ್ಥೆಯ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಕಾಮಗಾರಿ ಗುತ್ತಿಗೆದಾರರಿಗೆ ಸೂಚನೆಗಳನ್ನು ನೀಡಿದರು.
ಇದೇ ಸಂದರ್ಭದಲ್ಲಿ ಸವಣೂರು ಬಸ್ ನಿಲ್ದಾಣ ಮತ್ತು ಘಟಕಕ್ಕೆ ಭೇಟಿ ನೀಡಿ ಅನುಸೂಚಿಗಳ ಕಾರ್ಯಾಚರಣೆ ಪರಿಶೀಲನೆ ಮಾಡಿ, ಮುಂದಿನ ದಿನಗಳಲ್ಲಿ ಶಾಲಾ ಕಾಲೇಜುಗಳು ಪ್ರಾರಂಭವಾಗುವುದರಿಂದ ಸಾರ್ವಜನಿಕ ಪ್ರಯಾಣಿಕರು ಮತ್ತು ವಿದ್ಯಾರ್ಥಿ ಸಮುದಾಯಕ್ಕೆ ಯಾವುದೇ ರೀತಿಯ ಅನಾನುಕೂಲತೆ ಆಗದಂತೆ ಸುಗಮ ಸಾರಿಗೆ ಕಾರ್ಯಾಚರಣೆ ಮಾಡಲು ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಿದರು. ಸ್ಥಳದಲ್ಲಿ ಹಾಜರಿದ್ದ ಸಿಬ್ಬಂದಿಗಳ ಕುಂದುಕೊರತೆಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ವಿಭಾಗದ ಮತ್ತು ಘಟಕದ ಅಧಿಕಾರಿ/ಸಿಬ್ಬಂದಿ ವರ್ಗದವರು ಹಾಜರಿದ್ದರು.