ಬೆಂಗಳೂರು: ವಾಯು ಗುಣಮಟ್ಟ ಸೂಚ್ಯಂಕ (AQI) ಮೌಲ್ಯವು 100 ದಾಟಿದರೆ ಸಂಬಂಧಿತ ಸ್ಥಳೀಯ ಸಂಸ್ಥೆಗಳಿಗೆ ತಕ್ಷಣ ನೋಟಿಸ್ ಜಾರಿ ಮಾಡಿ, ನಿಗದಿತ ಕಾಲಮಿತಿಯಲ್ಲಿ ನಿಯಂತ್ರಣ ಕ್ರಮ ಕೈಗೊಳ್ಳುವಂತೆ ಸೂಚಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಕೋರಿಕೆಯ ಮೇರೆಗೆ ನಡೆದ ಉನ್ನತಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ರಾಷ್ಟ್ರ ರಾಜಧಾನಿ ದೆಹಲಿಯಂತೆಯೇ ಬೆಂಗಳೂರು ಕೂಡ ‘ಗ್ಯಾಸ್ ಚೇಂಬರ್’ ಆಗದಂತೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಈ ಸಂಬಂಧ ಶೀಘ್ರದಲ್ಲೇ ನಗರದ ಎಲ್ಲಾ 28 ಶಾಸಕರೊಂದಿಗೆ ಸಭೆ ನಡೆಸಲಾಗುವುದು ಎಂದರು.
ಬೆಂಗಳೂರು ನಗರದಲ್ಲಿ ವಾಯು, ಜಲ ಹಾಗೂ ಶಬ್ದ ಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆ, ನಿಯಂತ್ರಣಕ್ಕೆ ಪಕ್ಷಾತೀತವಾಗಿ ಎಲ್ಲ ಜನಪ್ರತಿನಿಧಿಗಳ ಸಹಕಾರ ಅಗತ್ಯವಿದೆ ಎಂದು ಹೇಳಿದರು.
ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸುರೇಶ್ ಕುಮಾರ್, ನಗರದ ರಸ್ತೆಗಳ ಧೂಳಿನಿಂದ ವಾಯು ಗುಣಮಟ್ಟ ಕುಸಿಯುತ್ತಿದ್ದು, ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಹೆಚ್ಚುತ್ತಿದೆ. ವೈದ್ಯರು ಬೆಂಗಳೂರು ಹೊರವಲಯಕ್ಕೆ ತೆರಳುವಂತೆ ಸಲಹೆ ನೀಡುತ್ತಿರುವುದು ಗಂಭೀರ ಪರಿಸ್ಥಿತಿ ಎಂದು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈಗಾಗಲೇ ಬೆಂಗಳೂರಿನ 11 ಸ್ಥಾಪಿತ ಕೇಂದ್ರಗಳು ಹಾಗೂ 13 ಸಂಚಾರಿ ಘಟಕಗಳ ಮೂಲಕ AQI ಮೌಲ್ಯಮಾಪನ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. AQI 100 ದಾಟಿದರೆ ತಕ್ಷಣ ನೋಟಿಸ್ ನೀಡಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಕ್ರಮ ವಹಿಸದಿದ್ದರೆ ನಿಯಮಾನುಸಾರ ಮೊಕದ್ದಮೆ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.



