ಮಂಗಳೂರು: ಮಂಗಳೂರು ನಗರದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಕೈಕೋಳದೊಂದಿಗೆ ನಟೋರಿಯಸ್ ಕ್ರಿಮಿನಲ್ ಪರಾರಿಯಾಗಿರುವ ಘಟನೆ ರೋಜಾರಿಯೋ ಚರ್ಚ್ ರಸ್ತೆಯಲ್ಲಿ ನಡೆದಿದೆ.
ಪರಾರಿಯಾದ ಆರೋಪಿಯನ್ನು ಬಾಗಲಕೋಟೆ ಮೂಲದ ಅಲ್ತಾಫ್ ಹುಸೇನ್ ಎಂದು ಗುರುತಿಸಲಾಗಿದೆ. ಆತ ಪರಾರಿಯಾಗುವ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಅಲ್ತಾಫ್ ಹುಸೇನ್ ವಾಹನ ಕಳ್ಳತನ, ಸರಗಳ್ಳತನ ಹಾಗೂ ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗಿದೆ. ಉತ್ತರ ಪ್ರದೇಶ ಮೂಲದ ಮಹಮ್ಮದ್ ಸಿದ್ದಿಕ್ ಮತ್ತು ರವಿ ಬೌರ ಎಂಬ ಇಬ್ಬರು ಸಹಚರರೊಂದಿಗೆ ಸೇರಿ ಕೃತ್ಯ ಎಸಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ನಗರದ ಜಪ್ಪಿನಮೊಗರು ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಸರಗಳ್ಳತನ ಪ್ರಕರಣದಲ್ಲೂ ಇದೇ ಗ್ಯಾಂಗ್ ಕೈವಾಡವಿದೆ ಎಂಬ ಶಂಕೆ ವ್ಯಕ್ತವಾಗಿದೆ. ಕೆಲವು ದಿನಗಳ ಹಿಂದೆ ಈ ಗ್ಯಾಂಗ್ ನಗರದ ಮೀನುಗಾರಿಕಾ ಬಂದರು ಪ್ರದೇಶಕ್ಕೆ ಮರಳಿರುವ ಖಚಿತ ಮಾಹಿತಿ ಪಡೆದ ಪೊಲೀಸರು ಮೂವರನ್ನೂ ಬಂಧಿಸಿ ಪಾಂಡೇಶ್ವರ ಪೊಲೀಸ್ ಠಾಣೆಗೆ ಕರೆತರುತ್ತಿದ್ದರು.
ಈ ವೇಳೆ ಅಲ್ತಾಫ್ ಹುಸೇನ್ ಪೊಲೀಸರನ್ನು ತಳ್ಳಿ ಹಲ್ಲೆ ನಡೆಸಿ ಕೈಕೋಳ ಸಮೇತ ಪರಾರಿಯಾಗಿದ್ದಾನೆ. ಸದ್ಯ ಪರಾರಿಯಾದ ಆರೋಪಿಯ ಬಂಧನಕ್ಕಾಗಿ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.



