ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ 80ನೇ ಸ್ವಾತಂತ್ರ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ವಿವಿಧ ಇಲಾಖೆಗಳ ಕೆಲವು ಅಧಿಕಾರಿಗಳು ಗೈರುಹಾಜರಾಗಿದ್ದಕ್ಕೆ ಶಾಸಕ ಕೆ. ನೇಮಿರಾಜ್ ನಾಯ್ಕ ಅಸಮಾಧಾನ ವ್ಯಕ್ತಪಡಿಸಿ, ಗೈರಾದ ಅಧಿಕಾರಿಗಳಿಗೆ ಕೂಡಲೇ ನೋಟಿಸ್ ಜಾರಿ ಮಾಡುವಂತೆ ತಹಶೀಲ್ದಾರ್‌ಗೆ ಸೂಚಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾವು ಕೊಟ್ಟೂರಿನಲ್ಲಿ ಧ್ವಜಾರೋಹಣ ಕಾರ್ಯಕ್ರಮ ಮುಗಿಸಿ ಆಗಮಿಸುವುದರಿಂದ ಶಾಲಾ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಉಪಾಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸ್ವಾತಂತ್ರ್ಯೋತ್ಸವವನ್ನು ಶಿಸ್ತುಬದ್ಧವಾಗಿ ಆಚರಿಸಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಿ ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಐವರು ಗಣ್ಯರನ್ನು ಸನ್ಮಾನಿಸಲು ತೀರ್ಮಾನಿಸಲಾಯಿತು.
ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಸೊನ್ನದ್ ಗುರು ಬಸವರಾಜ್, ಸಾಂಸ್ಕೃತಿಕ ಸ್ಪರ್ಧೆ ವಿಜೇತರಿಗೆ ಪುಸ್ತಕದ ಜೊತೆಗೆ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆ ನೀಡುವಂತೆ ಸಲಹೆ ನೀಡಿದರು.
ಪುರಸಭೆ ಅಧ್ಯಕ್ಷೆ ರೇಷ್ಮಾ ಸಿಕಂದರ್, ರಾಷ್ಟ್ರೀಯ ಹಬ್ಬವನ್ನು ಸಾರ್ವಜನಿಕರು, ರೈತರು ಹಾಗೂ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಸಂಭ್ರಮದಿಂದ ಆಚರಿಸಬೇಕೆಂದರು.
ರಾಷ್ಟ್ರೀಯ ಹಬ್ಬಗಳ ಸಮಿತಿ ಅಧ್ಯಕ್ಷೆ ಹಾಗೂ ತಹಶೀಲ್ದಾರ್ ಆರ್. ಕವಿತಾ, ಶಿಷ್ಟಾಚಾರದಂತೆ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ತಾಪಂ ಇಒ ಪಾಲಯ್ಯ, ಉಪ ತಹಶೀಲ್ದಾರ್ ಶಿವಕುಮಾರ್ ಗೌಡ, ಪುರಸಭೆ ಮುಖ್ಯಾಧಿಕಾರಿ ಎಂ.ಕೆ. ಮುಗಳಿ, ಬಿಇಒ ಎಸ್. ಜಗದೀಶ್, ಪಿಎಸ್‌ಐ ಉಮಾಪತಿ ನಾಯ್ಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
“ಪಟ್ಟಣದ ಎಲ್ಲ ಬ್ಯಾಂಕ್‌ಗಳ ಕಟ್ಟಡಗಳ ಮೇಲೂ ಕಡ್ಡಾಯವಾಗಿ ರಾಷ್ಟ್ರಧ್ವಜಾರೋಹಣ ನಡೆಯಬೇಕು.”
ಕೆ. ನೇಮಿರಾಜ್ ನಾಯ್ಕ, ಶಾಸಕ



