ವಿಜಯಸಾಕ್ಷಿ ಸುದ್ದಿ, ಗದಗ : ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿ ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಗಾರ ಬುಧವಾರ ಜರುಗಿತು. ನಗರದ ಗುರುಬಸವ ಶಾಲೆ ಮತ್ತು ಶಿರಹಟ್ಟಿಯಲ್ಲಿ ನಡೆದ ತರಬೇತಿ ಕಾರ್ಯಾಗಾರಕ್ಕೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಭೇಟಿ ನೀಡಿ ವೀಕ್ಷಿಸಿದರು. ಎಲ್ಲ ಮತಗಟ್ಟೆ ಅಧಿಕಾರಿಗಳು ಕಾರ್ಯಾಗಾರಕ್ಕೆ ಆಗಮಿಸಿರುವ ಬಗ್ಗೆ ಮಾಹಿತಿ ಪಡೆದರು.
ಉಪ ವಿಭಾಗಾದಿಕಾರಿ ವೆಂಕಟೇಶ ನಾಯ್ಕ್ ಮಾತನಾಡಿ, ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳು ಮಸ್ಟರಿಂಗ್, ಚುನಾವಣೆ ದಿನದಂದು ಅಣಕು ಮತದಾನ, ಮತದಾನ, ಮತದಾನ ಪೂರ್ಣಗೊಂಡ ನಂತರ ಅನುಸರಿಸಬೇಕಾದ ಕ್ರಮಗಳು, ಡಿಮಸ್ಟರಿಂಗ್ ಮತ್ತಿತರ ಕಾರ್ಯಗಳನ್ನು ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಹೇಳಿದರು.
ಲೋಕಸಭಾ ಚುನಾವಣೆ ಸಂಬಂಧ ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಮಾಡಬಾರದು ಎಂದರಲ್ಲದೆ, ಮತಗಟ್ಟೆ ಅಧಿಕಾರಿಗಳು ಪಾರದರ್ಶಕವಾಗಿ ಹಾಗೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಚುನಾವಣೆಗೆ ಸಂಬಂಧಿಸಿದಂತೆ ಮಾಹಿತಿ ತಿಳಿದುಕೊಂಡಲ್ಲಿ ಸುಗಮವಾಗಿ ಚುನಾವಣಾ ಕರ್ತವ್ಯ ನಿರ್ವಹಿಸಬಹುದು ಎಂದರು.
ಲೋಕಸಭಾ ಚುನಾವಣೆಗೆ ನಿಯೋಜನೆ ಆಗಿರುವ ಮತಗಟ್ಟೆ ಅಧಿಕಾರಿಗಳು ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳು ಕ್ರಮಬದ್ಧವಾಗಿ ಚುನಾವಣೆ ನಡೆಸಬೇಕು. ಸಂಶಯ ಇದ್ದಲ್ಲಿ ಸೆಕ್ಟರ್ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು. ವಿದ್ಯುನ್ಮಾನ ಮತಯಂತ್ರಗಳ ನಿರ್ವಹಣೆ, ಅಣಕು ಮತದಾನ ಮತ್ತಿತರ ಸಂಬಂಧ ಮತಗಟ್ಟೆ ಅಧಿಕಾರಿಗಳು ಜಾಗೃತಿ ವಹಿಸಬೇಕು. ಚುನಾವಣಾ ಪಾವಿತ್ರ್ಯತೆ ಕಾಪಾಡಬೇಕು ಎಂದು ಹೇಳಿದರು.
ಮಸ್ಟರಿಂಗ್, ಮತದಾನದಂದು ಮತ್ತು ಮತದಾನ ಪೂರ್ಣಗೊಂಡ ನಂತರ ಡಿಮಸ್ಟರಿಂಗ್ ಕಾರ್ಯನಿರ್ವಹಣೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು. ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿ, ಏಜೆಂಟ್ ಅವರು ಚುನಾವಣೆ ಸಂಬಂಧ ಆಯೋಗದ ನಿರ್ದೇಶನ ಪಾಲಿಸಬೇಕು ಎಂದು ತಿಳಿಸಿದರು.
ಮತಗಟ್ಟೆ ಅಧಿಕಾರಿಗಳು ಅಣಕು ಮತದಾನ, ಪ್ರಮಾಣ ಪತ್ರ ಬರೆಯುವುದು, ಇವಿಎಂ, ಕಂಟ್ರೊಲ್ ಯುನಿಟ್, ಬ್ಯಾಲೆಟ್ ಯುನಿಟ್ ಹಾಗೂ ವಿವಿಪ್ಯಾಟ್ ಬಗ್ಗೆ ಸ್ಪಷ್ಟವಾಗಿ ತಿಳಿದುಕೊಳ್ಳಬೇಕು ಎಂದು ಹೇಳಿದರು. ತಹಸೀಲ್ದಾರ ಶ್ರೀನಿವಾಸ ಕುಲಕರ್ಣಿ ಸೇರಿದಂತೆ ಮತ್ತಿತರರು ಇದ್ದರು.
ಪ್ರತಿ ಮತಗಟ್ಟೆಯಲ್ಲಿ ಮತಗಟ್ಟೆ ಅಧ್ಯಕ್ಷಾಧಿಕಾರಿ, ಸಹಾಯಕ ಮತಗಟ್ಟೆ ಅಧ್ಯಕ್ಷಾಧಿಕಾರಿ, ಎರಡನೇ ಮತಗಟ್ಟೆ ಅಧಿಕಾರಿ ಮತ್ತು ಮೂರನೇ ಮತಗಟ್ಟೆ ಅಧಿಕಾರಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಉಪ ವಿಭಾಗಾಧಿಕಾರಿ ವೆಂಕಟೇಶ ನಾಯ್ಕ್ ತಿಳಿಸಿದರು.
Advertisement