ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಜಿಟಿಜಿಟಿ ಮಳೆಯ ನಡುವೆಯೇ ಗಜೇಂದ್ರಗಡ ಕೇಂದ್ರ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳು ಪೊರಕೆ ಹಿಡಿದು ಸ್ವಚ್ಛತಾ ಶ್ರಮದಾನ ನಡೆಸುವ ಮೂಲಕ ಸಾರ್ವಜನಿಕರಲ್ಲಿ ಸ್ವಚ್ಛತೆಯ ಅರಿವು ಮೂಡಿಸಿದರು.
ತಾಲೂಕು ಪಂಚಾಯಿತಿ, ತಾಲೂಕು ಗ್ಯಾರಂಟಿ ಸಮಿತಿ, ಪುರಸಭೆ, ಕೆಎಸ್ಆರ್ಟಿಸಿ ಹಾಗೂ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಸಂಯುಕ್ತ ಆಶ್ರಯದಲ್ಲಿ ಬಸ್ ನಿಲ್ದಾಣ ಆವರಣದಲ್ಲಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಬೆಳಿಗ್ಗೆ 6.30ರಿಂದ 9 ಗಂಟೆಯವರೆಗೆ ಬಸ್ ನಿಲ್ದಾಣ, ಇಂದಿರಾ ಕ್ಯಾಂಟೀನ್, ಶೌಚಾಲಯ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿ ಕಸವನ್ನು ತೆರವುಗೊಳಿಸಲಾಯಿತು. ಬಳಿಕ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಶರಣಪ್ಪ ಬೆಟಗೇರಿ ಬಸ್ ನಿಲ್ದಾಣದ ಆವರಣದಲ್ಲಿ ಸ್ಯಾನಿಟೈಸರ್ ಸಿಂಪಡಿಸಿದರು.
ಅಂಗಡಿ ಮಾಲೀಕರನ್ನು ಭೇಟಿ ಮಾಡಿದ ಅಧಿಕಾರಿಗಳು ಕಸವನ್ನು ಎಲ್ಲೆಂದರಲ್ಲಿ ಎಸೆಯದೆ ಒಂದು ಕಡೆ ಸಂಗ್ರಹಿಸಿ ಪುರಸಭೆ ವಾಹನಕ್ಕೆ ನೀಡುವಂತೆ ಮನವಿ ಮಾಡಿದರು.
ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಶರಣಪ್ಪ ಬೆಟಗೇರಿ ಮಾತನಾಡಿ, ಸ್ವಚ್ಛತೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು, ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟರೆ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಕಂದಕೂರು ಮಾತನಾಡಿ, ವೈಯಕ್ತಿಕ ಸ್ವಚ್ಛತೆಯೊಂದಿಗೆ ಸಾರ್ವಜನಿಕ ಸ್ಥಳಗಳ ಸ್ವಚ್ಛತೆಗೂ ಆದ್ಯತೆ ನೀಡಬೇಕು. ಸರ್ಕಾರದ ಸ್ವಚ್ಛತಾ ಅಭಿಯಾನಗಳು ಯಶಸ್ವಿಯಾಗಲು ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯವಾಗಿದೆ. ಗ್ರಾಮ ಪಂಚಾಯಿತಿಗಳೊಂದಿಗೆ ಸಾರ್ವಜನಿಕರು ಕೈಜೋಡಿಸಿದರೆ ಸ್ವಚ್ಛ ಮತ್ತು ಸುಂದರ ಪರಿಸರ ನಿರ್ಮಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕ (ಪಂ.ರಾಜ್) ಬಸವರಾಜ ಬಡಿಗೇರ್, ಪುರಸಭೆ ಮುಖ್ಯಾಧಿಕಾರಿ ಬಸವರಾಜ ಬಳಗಾನೂರ, ಕೆಎಸ್ಆರ್ಟಿಸಿ ಘಟಕದ ವ್ಯವಸ್ಥಾಪಕ ಕೆ.ಎಸ್. ಜಿಗಳೂರು, ತಾಲೂಕು ಯೋಜನಾಧಿಕಾರಿ ಅರವಿಂದ ಬಂಡಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಪೌರಕಾರ್ಮಿಕರು ಭಾಗವಹಿಸಿದ್ದರು.
“ಸ್ವಚ್ಛತೆ ಕೇವಲ ಸರ್ಕಾರದ ಕೆಲಸವಲ್ಲ, ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಹೌದು. ಸಾರ್ವಜನಿಕರ ಸಹಭಾಗಿತ್ವದಿಂದಲೇ ಸ್ವಚ್ಛ ಭಾರತ ಪರಿಕಲ್ಪನೆ ಯಶಸ್ವಿಯಾಗಲಿದೆ.”
ಚಂದ್ರಶೇಖರ ಕಂದಕೂರು, ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯಿತಿ ಗಜೇಂದ್ರಗಡ



